ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಭಟನೆ

Published on

ಮೈಸೂರು: ವರುಣ ವಿಧಾನಸಭಾ ಕ್ಷೇತ್ರದ ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.

ವರುಣ ವಿಧಾನಸಭಾ ಕ್ಷೇತ್ರದ ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಡಲಾದ ಅವಮಾನ ಇಡೀ ದೇಶಕ್ಕಾದ ಅವಮಾನವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿಲ್ಲ. ಸಾಮಾನ್ಯ ಪ್ರಕರಣದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಎಂಟು ದಿನದೊಳಗೆ ಆರೋಪಿಗಳನ್ನು ಬಂಧಿಸಿ ಸೂಕ್ತ ಎಫ್‌ಐಆರ್ ದಾಖಲಿಸದಿದ್ದರೆ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ತವರು ಕ್ಷೇತ್ರದಲ್ಲಿಯೇ ಇಂಥ ಘಟನೆ ನಡೆದಿದ್ದರೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಸಿದ್ದರಾಮಯ್ಯ, ಗೃಹಮಂತ್ರಿ ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಇಲಾಖೆಯಲ್ಲಿ ಸಂವೇದನೆ ಜಾಗೃತಗೊಳಿಸಬೇಕು ಎಂದರು.

ಈವರೆಗೆ ರಾಜ್ಯದಲ್ಲಿ ನಡೆದಿರುವ ಅಂಬೇಡ್ಕರ್ ಭಾವಚಿತ್ರ, ಪ್ರತಿಮೆಗಳ ಮೇಲೆ ನಡೆದ ದಾಳಿ, ವಿಕೃತಿಗಳ ಬಗ್ಗೆಯೂ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಚ್.ಗಂಗಾಧರ್, ಜಿಲ್ಲಾ ಉಸ್ತುವಾರಿ ಬಸವಣ್ಣ ದಂಡಿಕೆರೆ, ಜಿಲ್ಲಾ ಸಂಯೋಜಕ ಬಿ.ಮಹದೇವಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರ ಉಸ್ತುವಾರಿ ತಳೂರು ಬಸವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net