

ಮೈಸೂರು: ಬೇಕರಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಿ, ಕಾರ್ಮಿಕರಿಗೆ ರಕ್ಷಣೆ ಹಾಗೂ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬೇಕರಿ ಪದಾರ್ಥ ತಯಾರಿಕಾ ಕಾರ್ಮಿಕರ ಸಂಘದಿಂದ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಕುಂದನಹಳ್ಳಿ ಸಮೀಪವಿರುವ ಬೇಕರಿಯಲ್ಲಿ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರ ಮೇಲೆ ಸ್ಥಳೀಯ ರೌಡಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದವರು ವಲಸೆ ಕಾರ್ಮಿಕರಾಗಿದ್ದು, ಸರ್ಕಾರದ ಯಾವುದೇ ಸೌಲಭ್ಯ ಪಡೆಯದ ಬಡ ಕುಟುಂಬದವರು. ಹೊಟ್ಟೆಪಾಡಿಗಾಗಿ ದುಡಿಯುವ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದ್ದು, ಇದರಿಂದ ನೆಮ್ಮದಿಯ ಜೀವನ ನಡೆಸುವುದೇ ಕಷ್ಟವಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಹಲ್ಲೆ ಮಾಡಿದ ರೌಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಕಾರ್ಮಿಕ ಇಲಾಖೆಯಿಂದ ಹೊಸ ಯೋಜನೆ ಜಾರಿಗೊಳಿಸಿ ಕಾರ್ಮಿಕರ ಪರ ನಿಲ್ಲಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಧ್ಯಕ್ಷ ಶಿವರಾಜು, ಉಪಾಧ್ಯಕ್ಷ ವಿಮಲ್‌ಕುಮಾರ್, ಕಾರ್ಯದರ್ಶಿ ಆನಂದ್ ಸೇರಿದಂತೆ ಹಲವರು ಭಾಗವಹಿಸಿದ್ದರು.