ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರವೆಂದು ಆರೋಪ

Protest by BJP and Hindu activists Mandya
Published on

ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಕೆಲ ಕಿಡಿಗೇಡಿಗಳು ಷಡ್ಯಂತ್ರ ನಡೆಸುವ ಮೂಲಕ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಜನ ಭಕ್ತರು ಆಗಮಿಸುತ್ತಾರೆ. ಹಿಂದುಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಆದರೆ ಹಿಂದುಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಇದರ ಹಿಂದೆ ಹಿಂದುಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂ ವ್ಯಯಿಸಿ ಆತ ಹೇಳಿದ ಕಡೆಗಳಲ್ಲೆಲ್ಲ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಕ ವ್ಯಕ್ತಿಗಳು ಯಾರು?. ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿಲ್ಲ. ಆದ್ದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಬಳಪಡಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ವಸಂತ್‌ಕುಮಾರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಅಶೋಕ್‌ಕುಮಾರ್, ವಿವೇಕ್, ಪ್ರಸನ್ನ, ಮಾದರಾಜೇ ಅರಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net