

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಜಂಟಿ ಕಾರ್ಮಿಕ ಸಂಘಗಳು (ಜೆಸಿಟಿಯು), ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಮದ್ದೂರು ತಾಲೂಕು ಸಮಿತಿ ವತಿಯಿಂದ ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ, ರೈತ ಹಾಗೂ ಜನ ವಿರೋಧಿ ನೀತಿಗಳ ವಿರುದ್ಧ ಹಾಗೂ ರೈತ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ, ದುಡಿಯುವ ಜನರ ಹಕ್ಕುಗಳ ಉಳಿವಿಗಾಗಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದರು.
ಮುಷ್ಕರದ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಪಟ್ಟಣದ ಪ್ರವಾಸಿ ಮಂದಿರದ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ಪ್ರವಾಸಿ ಮಂದಿರದ ಬೆಂಗಳೂರು- ಮೈಸೂರು ಹೆದ್ದಾರಿಗೆ ಆಗಮಿಸಿ ಹೆದ್ದಾರಿ ತಡೆದು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ 100 ಮಂದಿ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಮಂಜುಳಾ ರಾಜ್, ಜನವಾದಿ ಮಹಿಳಾ ಸಂಘಟನೆಯ ಡಿ.ಶೋಭಾ, ಸಿದ್ದರಾಜು, ಕೃಷಿ ಕೂಲಿಕಾರರ ಸಂಘದ ಮದ್ದೂರು ತಾಲೂಕು ಕಾರ್ಯದರ್ಶಿ ಟಿ.ಪಿ.ಅರುಣ್ ಕುಮಾರ್ ಇದ್ದರು.