ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಖಂಡನೆ: ರೈತರ ಹಿತರಕ್ಷಣಾ ಸಮಿತಿಯಿಂದ ಹೆದ್ದಾರಿ ಸಂಚಾರಕ್ಕೆ ತಡೆ

Protest by Farmer Welfare Committee
Published on

ಮಂಡ್ಯ: ಕಾವೇರಿ ಕಣಿವೆ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಹೆದ್ದಾರಿ ಸಂಚಾರ ತಡೆ ನಡೆಸಿದರು.

ಸರ್‌ಎಂವಿ ಪ್ರತಿಮೆ ಎದುರು ನಿರಂತರ ಧರಣಿ ನಡೆಸುತ್ತಿರುವ ರೈತರು, ಪ್ರಗತಿಪರರು, ಕನ್ನಡಪರ ಹೋರಾಟಗಾರರು ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಕೆಲಕಾಲ ಧರಣಿ ನಡೆಸಿ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ಕಾವೇರಿ ನೀರು ಹಂಚಿಕೆ ಸಂಬಂಧ ಮುಂದಿನವಾರ ಸುಪ್ರೀಂ ಕೋಟರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಈ ಕಾರಣಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಲು ರಾಜ್ಯ ಸರ್ಕಾರ ತ.ನಾಡಿಗೆ ಯಾವುದೇ ಕಾರಣಕ್ಕೂ ಒಂದು ಹನಿ ನೀರು ಬಿಡಬಾರದು. ಆಗಸ್ಟ್ ಮತ್ತು ಸೆಪ್ಟಂಬರ್‌ನಲ್ಲಿ ದುಡುಕಿನ ನಿರ್ಧಾರ ಕೈಗೊಂಡು ನೀರು ಬಿಟ್ಟ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ 97 ಅಡಿಗೆ ಕುಸಿದಿದೆ. ಒಂದು ವೇಳೆ ಪ್ರಾಧಿಕಾರ ಆದೇಶದಂತೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ಹದಿನೈದು ದಿನ ಹರಿಸಿದರೆ ಏಳು ಟಿಎಂಸಿ ಖಾಲಿಯಾಗಲಿದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ತಳ ಕಾಣಲಿದ್ದು, ಕುಡಿಯಲು ಸಹ ನೀರು ಇಲ್ಲದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇತ್ತ ತ.ನಾಡಿಗೆ ಸಧ್ಯದ ಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲವೆಂದು ತಿಳಿಸಿರುವ ರಾಜ್ಯ ಸರ್ಕಾರ ಅದೇ ನಿಲುವಿಗೆ ಬದ್ಧರಾಗಬೇಕು. ಮಾತ್ರವಲ್ಲದೆ ಜಿಲ್ಲೆಯ ಶಾಸಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು. ಈ ಮೂಲಕ ರೈತರ ಹಿತ ಕಾಪಾಡಲು ಮುಂದಾಗಬೇಕು. ಅಂತೆಯೇ ರಾಜ್ಯದ ಸಂಸದರು ದನಿ ಎತ್ತಿ ಕೇಂದ್ರ ಸರ್ಕಾರ ಸಂಕಷ್ಟ ಕಾಲದಲ್ಲಿ ಮಧ್ಯಪ್ರವೇಶಿಸುವಂತೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಹಿತರಕ್ಷಣಾ ಸಮಿತಿಯ ಸುನಂದಾ ಜಯರಾಂ, ಗುರುಪ್ರಸಾದ್ ಕೆರಗೋಡು, ಎಂ.ವಿ.ಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net