

ಪಾಂಡವಪುರ : ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಸ್ಥಾಪಿಸಿರುವ ರೈತ ಹೋರಾಟಗಾರ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ಥಳಿ ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ದೂರು ನೀಡಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತಸಂಘ ಕಾರ್ಯಕರ್ತರು ಪುಟ್ಟಣ್ಣಯ್ಯ ಅವರ ಭಾವಚಿತ್ರ ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು.
ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದಲ್ಲಿ ಸ್ಥಾಪಿಸಿರುವ ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ಥಳಿ ಮುಂದೆ ಜಮಾವಣೆಗೊಂಡ ನೂರಾರು ಕಾರ್ಯಕರ್ತರು,ಪುಟ್ಟಣ್ಣಯ್ಯ ಅವರ ಪುತ್ಥಳಿ ತೆರವಿಗೆ ದೂರು ನೀಡುವ ಮೂಲಕ ಗ್ರಾಮದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಗ್ರಾಮದ ನಿವಾಸಿ ಕೆ.ಆರ್.ನಾಗೇಶ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಸಣ್ಣತನದ ರಾಜಕಾರಣದ ಮೂಲಕ ಗ್ರಾಮಸ್ಥರ ಒಗ್ಗಟ್ಟು ಒಡೆಯಲು ಪ್ರಯತ್ನಿಸುತ್ತಿರುವ ಇವರನ್ನು ಗ್ರಾಮದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಸ್ಥಳಕ್ಕಾಗಮಿಸಿದ್ದ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪಿ.ಜಿ.ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಕಂಡ ರೈತ ಹೋರಾಟಗಾರರಲ್ಲಿ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರು ಪ್ರಮುಖರಾಗಿದ್ದಾರೆ. ನಾಡಿನ ನೆಲ, ಜಲದ ವಿಚಾರದಲ್ಲಿ ಮುಂಚೂಣಿಯಲ್ಲಿ ನಿಂತು ವಿಧಾನಸೌಧದ ಒಳಗೆ ಮತ್ತು ಹೊರಗೆ ನಿರಂತರವಾಗಿ ಹೋರಾಟ ಮಾಡುವ ಮೂಲಕ ಸದಾ ರೈತರ ಹಿತ ಬಯಸುತ್ತಿದ್ದರು. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಶಾಸಕರಾಗಿದ್ದರೂ ಕೂಡ ಸರ್ಕಾರದ ವಿರುದ್ಧ ಯಾವುದೇ ಮುಲಾಜಿಲ್ಲದೆ ಪ್ರತಿಭಟನೆ ರೂಪಿಸಿ ವಾಸ್ತವತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತಿದ್ದರು. ಇಂತಹ ಮಹಾನ್ ವ್ಯಕ್ತಿಯ ಪುತ್ಥಳಿಯನ್ನು ತೆರವುಗೊಳಿಸಲು ಕೆಲವರು ಹುನ್ನಾರ ನಡೆಸಿದ್ದು, ಪುತ್ಥಳಿ ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದು ಒತ್ತಡ ಹಾಕುತ್ತಿದ್ದಾರೆ. ಈ ಮೂಲಕ ಗ್ರಾಮದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರದ ವೇಳೆ ಪುಟ್ಟಣ್ಣಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕವೇ ಪ್ರಚಾರ ಕಾರ್ಯ ಆರಂಭಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸಾಕಷ್ಟು ರೈತಸಂಘ ಕಾರ್ಯಕರ್ತರು ಈ ಕಾರಣಕ್ಕಾಗಿಯೇ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದಾರೆ. ಆದರೆ ಕೆಲ ಕಿಡಿಗೇಡಿಗಳು ಕುಮಾರಸ್ವಾಮಿ ಅವರ ಗೆಲುವಿನ ನಂತರ ಪುಟ್ಟಣ್ಣಯ್ಯ ಅವರ ಪುತ್ಥಳಿ ತೆರವುಗೊಳಿಸಬೇಕು ಎಂದು ಹಠಕ್ಕೆ ಬಿದ್ದು ಈ ರೀತಿಯ ವರ್ತನೆ ತೋರುತ್ತಿದ್ದಾರೆ. ಲೋಕೋಪಯೋಗಿ ಇಲಾಖೆಗೆ ದೂರು ನೀಡಿರುವ ವ್ಯಕ್ತಿಗಳು ತಮ್ಮ ವರ್ತನೆ ಬದಲಾಯಿಸಿಕೊಂಡು ಪುಟ್ಟಣ್ಣಯ್ಯ ಅವರ ಹೋರಾಟಕ್ಕೆ ಬೆಲೆ ಕೊಟ್ಟು ಗೌರವದಿಂದ ನಡೆದುಕೊಳ್ಳಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಇನ್‌ಸ್ಪೆಕ್ಟರ್ ಪಿ.ಜಿ.ಕುಮಾರ್, ಗ್ರಾಮದಲ್ಲಿ ಆಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿಯಾಗಲಿ ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಯನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ ಬಳಿಕ ಮುಂದಿನ ಕ್ರಮ ವಹಿಸುವುದಾಗಿ ತಿಳಿಸಿದರು.
ರೈತಸಂಘ ಮುಖಂಡರಾದ ನಂದೀಶ್, ರಂಗಶೆಟ್ಟಿ, ಕುಮಾರ್, ರವಿ, ವಿನಯ್, ಮಂಜು, ನಾಗರಾಜು, ಶ್ರೇಯಸ್, ಮಹದೇವು, ಪುಟ್ಟಣ್ಣಯ್ಯ, ಹರ್ಷಿತ್, ನಂಜುಂಡೇಗೌಡ ಇತರರು ಇದ್ದರು.