ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ)ದಿಂದ ಪ್ರತಿಭಟನೆ

Published on

ಮೈಸೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಗರದಲ್ಲಿ ಸೆ.12ರಂದು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಜಿಲ್ಲಾ ಸಂಚಾಲಕ ಉಗ್ರಪ್ಪ ತಿಳಿಸಿದರು.
ಅಂದು ಬೆಳಗ್ಗೆ 11ಕ್ಕೆ ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ತಮಟೆ ಚಳವಳಿ ನಡೆಸಲಾಗುವುದು. ಸಾಮಾಜಿಕ ನ್ಯಾಯಪರ ಇರುವ ದಲಿತ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು, ವಿದ್ಯಾರ್ಥಿಗಳು, ದಸಂಸ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಶೋಷಿತ ಸಮುದಾಯ ಒತ್ತಾಯ ಮಾಡಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿಗೆ ಒಪ್ಪಿಗೆ ನೀಡಿದೆ. ಸರ್ಕಾರ ಜಾರಿ ಮಾಡಿಲ್ಲ ಎಂದು ದೂರಿದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ವಿಚಾರದಲ್ಲಿದ್ದ ಗೊಂದಲ ಪರಿಹರಿಸಿದೆ. ಒಳ ಮೀಸಲಾತಿ ಸಮಾನತೆ ಸಾಧಿಸಲು ಅಗತ್ಯವಾಗಿದೆ ಎಂದು ಹೇಳಿದೆ. ಪರಿಶಿಷ್ಟ ಜಾತಿಯ ಸಮುದಾಯಗಳು ಸಮರೂಪದಲ್ಲಿಲ್ಲ ಮತ್ತು ಅವುಗಳಿಗೆ ಅಗೋಚರವಾದ ಏಕರೂಪವೂ ಇಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದರು.
ಈ ಜಾತಿಗಳ ಒಳಗೆ ಇರುವ ಕೆಲವು ಉಪ ಜಾತಿಗಳಿಗೆ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಉಪಜಾತಿಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಹಿಂದುಳಿದಿರುವಿಕೆಯ ಆಧಾರದಲ್ಲಿ ಒಳಮೀಸಲಾತಿ ನೀಡಿದರೆ ಈವರೆಗೆ ಮೀಸಲಾತಿಯ ಲಾಭ ಪಡೆದುಕೊಳ್ಳಲು ಸಾಧ್ಯವಾಗದ ಸಮುದಾಯಗಳಿಗೆ ಪ್ರಯೋಜನ ದೊರೆಯುತ್ತದೆ ಎಂದರು.
ನ್ಯಾಯಾಲಯದ ಆದೇಶ ಇದ್ದರೂ ರಾಜ್ಯ ಸರ್ಕಾರ ಆದೇಶವನ್ನು ತಿಂಗಳು ಕಳೆದರೂ ಅನುಷ್ಠಾನಗೊಳಿಸಿಲ್ಲ. ಹೀಗಾಗಿ ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಮುಖಂಡರಾದ ಕೆ.ಎಚ್.ವೆಂಕಟೇಶ್, ಮಹೇಶ್, ಲೋಕೇಶ್, ಸಿದ್ದರಾಜು, ಗೋಪಾಲ್, ಕೃಷ್ಣಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net