

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ವಯೋಮಿತಿ ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ದೇಶದ ಬೇರೆ ರಾಜ್ಯಗಳಲ್ಲಿ 30ರಿಂದ 35 ವರ್ಷದ ವರೆವಿಗೂ ಇದೆ. ಆದರೆ ನಮ್ಮ ರಾಜ್ಯದಲ್ಲಿ 27 ವರ್ಷಕ್ಕೆ ಮಿತಿಗೊಳಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.
ಸಾಮಾನ್ಯ ವರ್ಗಕ್ಕೆ 30, ಪ.ಜಾ, ಪ.ಪಂ ವಿದ್ಯಾರ್ಥಿಗಳಿಗೆ 33 ವರ್ಷಕ್ಕೆ ಏರಿಕೆ ಮಾಡಬೇಕು. ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಆಗಿಲ್ಲ. ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ಸೇರಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಮುಖಂಡರಾದ ಲೋಕೇಶ್‌ಕುಮಾರ್, ಹೇಮಂತ್‌ಗೌಡ, ಶಿವರಾಜ್, ಚಂದ್ರಶೇಖರ್, ಮದನ್, ಸುನಂದಪ್ರಸಾದ್, ಇಮ್ರಾನ್ ಇತರರು ಇದ್ದರು.