

ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಖಂಡಿಸಿ ನಾಯಕ ಸಮುದಾಯದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಸುಣ್ಣದಕೇರಿ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ (ಪಿಯಾ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಚಂದ್ರಶೇಖರ್ ಬಹುಕೋಟಿ ಅಕ್ರಮ ಬಯಲಿಗೆಳೆದು ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಸರ್ಕಾರ ತನಿಖೆಗೆ ಆದೇಶಿದೆ. ಆದರೂ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ನಾಯಕರು ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿ, ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಲು ಒತ್ತಾಯಿಸಿರುವುದು ಸರಿಯಲ್ಲ ಎಂದು ದೂರಿದರು.
ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ತನಿಖೆ ಮಾಡುತ್ತಾರೆ. ಶಿಕ್ಷೆ ನೀಡುತ್ತೇವೆ ಎಂದು ನಾಗೇಂದ್ರ ಅವರು ಹೇಳಿದರೂ ಅವರ ಮೇಲೆ ಉದ್ದೇಶಪೂರ್ವಕವಾಗಿ ಟೀಕೆ ಮಾಡುತ್ತಿದ್ದಾರೆ. ಇದು ನಾಯಕ ಸಮುದಾಯವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಮುಖಂಡರಾದ ಸತೀಶ್, ಸಿದ್ದಪ್ಪ, ದೇವರಾಜ್ ಕಾಟೂರ್, ಕೃಷ್ಣನಾಯಕ, ಶೇಖರ್, ಮಂಜುನಾಥ್ ಇತರರು ಇದ್ದರು.