

ಪಾಂಡವಪುರ: ತಾಲೂಕಿನ ಬನ್ನಘಟ್ಟದಿಂದ ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರುವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದರಿಂದ ರಸ್ತೆಯ ಇಕ್ಕೆಲಗಳ ನಿವಾಸಿಗಳು ಮತ್ತು ವ್ಯಾಪಾರಿಗಳಿಗೆ ತೊಂದರೆಯಾಗಲಿದೆ ಎಂದು ಆರೋಪಿಸಿ ಸ್ಥಳೀಯರು ಮಂಗಳವಾರ ಪ್ರತಿಭಟಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.
ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಿಂದ ಬನ್ನಾರಿ ಅಮ್ಮನ ದೇವಸ್ಥಾನದವರೆಗೆ ಚರಂಡಿ ನಿರ್ಮಾಣವಾಗಿಲ್ಲ. ಹೀಗಾಗಿ ಈ ಭಾಗದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ರಸ್ತೆ ನಿರ್ಮಾಣಕ್ಕೂ ಮೊದಲು ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಗುತ್ತಿಗೆದಾರರ ಕಡೆಯವರು ಜನರೊಂದಿಗೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಚರಂಡಿ ನಿರ್ಮಾಣ ಮಾಡದಿದ್ದರೆ ರಸ್ತೆ ಕಾಮಗಾರಿ ಕೆಲಸ ಮಾಡಲು ಅವಕಾಶ ಮಾಡಿಕೊಡುವುದಿಲ್ಲ. ಚರಂಡಿ ಸಮಸ್ಯೆಯಿಂದಾಗಿ ಈಗಾಗಲೇ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಮೊದಲು ರಸ್ತೆಯ ಎರಡು ಬದಿಯಲ್ಲಿ ಚರಂಡಿ ನಿರ್ಮಿಸಿದ ಬಳಿಕ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.
ಪಿಎಸಿಎಸ್ ಮಾಜಿ ಅಧ್ಯಕ್ಷ ಬಲರಾಮು ಮಾತನಾಡಿ, ಈ ಭಾಗದಲ್ಲಿ ಒಳಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಇದೇ ನೀರನ್ನು ನಾವು ಪ್ರತಿನಿತ್ಯ ಬಳಸುವಂತಾಗಿದೆ. ಇದರ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಈಗಲೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ. ಯಾವ ಆಧಾರದ ಮೇಲೆ ಗುತ್ತಿಗೆದಾರರು ಮತ್ತು ಪ್ರಾಧಿಕಾರದ ಅಧಿಕಾರಿಗಳು ಈ ರೀತಿಯ ಅವೈಜ್ಞಾನಿಕ ಕೆಲಸ ಮಾಡುತ್ತಿದ್ದಾರೆ ಎಂಬುದು ತಿಳಿದಿಲ್ಲ. ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಚರಂಡಿ ನಿರ್ಮಾಣ ಮಾಡದಿದ್ದರೆ ಕಾಮಗಾರಿ ನಡೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಎಚ್ಚರಿಸಿದರು.
ರೈತ ಸಂಘ ಮುಖಂಡರ ಸಂತೋಷ್ ಮಾತನಾಡಿ, ಡಾ.ರಾಜ್‌ಕುಮಾರ್ ವೃತ್ತದಿಂದ ಪಟ್ಟಣ ವ್ಯಾಪ್ತಿಯಲ್ಲಿ ಹಾದು ಹೋಗುವ ರಸ್ತೆಯ ಅಗಲ ಒಂದೇ ಸಮನಾಗಿರಬೇಕು. ಆದರೆ ಗುತ್ತಿಗೆದಾರ ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಮಗಾರಿಯ ಅಂದಾಜು ಪಟ್ಟಿ ಮತ್ತು ಇತರ ವಿಚಾರಗಳ ಬಗ್ಗೆ ಮಾಹಿತಿ ಕೇಳಿದರೆ ಅಧಿಕಾರಿಗಳು ನೀಡುತ್ತಿಲ್ಲ. ರಸ್ತೆ ಬದಿಯ ಪಾದಚಾರಿ ಮಾರ್ಗದ ಮೇಲ್ಮೈಯನ್ನು ಜೆಸಿಬಿಯಿಂದ ಕೆರೆದು ಎರಡ್ಮೂರು ಇಂಚಿಗೆ ಮೆಟ್‌ಲಿಂಗ್ ಮಾಡಲಾಗುತ್ತಿದೆ. ಇದರಿಂದ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರುವುದಿಲ್ಲ. ಕಾಮಗಾರಿಯ ಅಂದಾಜು ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ಬಳಿಕ ಕೆಲಸ ಮಾಡಬೇಕು. ಇಲ್ಲವಾದರೆ ಕಾಮಗಾರಿ ತಡೆಯಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಚಿಕ್ಕಾಡೆ ರಾಜಪ್ಪ, ಸಂತೋಷ್, ಮೋಹನ, ನಾಗರಾಜೇಗೌಡ ಇತರರು ಇದ್ದರು.