ಭಾರತ ವಿದ್ಯಾರ್ಥಿ ಫೆಡರೇಷನ್‌ನಿಂದ ಪ್ರತಿಭಟನೆ

Published on

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಿ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನಿಂದ ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಮೈಸೂರು ವಿಶ್ವವಿದ್ಯಾಲಯ ನವೆಂಬರ್ 28ರಿಂದ ಪದವಿ ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಆದರೆ ಮೈಸೂರು ವಿವಿ ವ್ಯಾಪ್ತಿಗೆ ಬರುವ ಪದವಿ ಕಾಲೇಜುಗಳಲ್ಲಿ ಜು.10ರಿಂದ ತರಗತಿಗಳು ಆರಂಭವಾಗಿದ್ದು, ಬಹುತೇಕ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠ ಪ್ರವಚನಗಳು ನಡೆದಿಲ್ಲ ಎಂದು ದೂರಿದರು.

ಎರಡು ತಿಂಗಳ ನಂತರ ಅತಿಥಿ ಉಪನ್ಯಾಸಕರನ್ನು ನೇಮಿಸಿದ್ದು, ಅಕ್ಟೋಬರ್‌ನಲ್ಲಿ ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಪಠ್ಯ ಪೂರ್ಣಗೊಂಡಿಲ್ಲ. ಇಲ್ಲಿಯವರೆಗೆ ಶೇ.20ರಿಂದ 30ರಷ್ಟು ಮಾತ್ರ ಪಾಠ ಪ್ರವಚನಗಳು ನಡೆದಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಕಷ್ಟವಾಗುತ್ತದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ಆಗ್ರಹಿಸಿದರು.

ಸಾಲು ಸಾಲು ರಜೆ ಇರುವುದರಿಂದ ಪರೀಕ್ಷಾ ಶುಲ್ಕ ಪಾವತಿಸಲು ಕೆಲ ವಿದ್ಯಾರ್ಥಿಗಳಿಗೆ ಸಾಧ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಪರೀಕ್ಷೆ ಮುಂದೂಡಿ, ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಟಿ.ಎಸ್.ವಿಜಯ್‌ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಚಿರಾಗ್ ಎಸ್.ಕೆ.ಮೂರ್ತಿ, ಜಿಲ್ಲಾ ಕಾರ್ಯದರ್ಶಿ ಟಿ.ಪ್ರಜ್ವಲ್, ಮುಖಂಡ ಸಂತೋಷ್ ಜಾಧವ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net