ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ

mysore
Published on

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ವೆಬ್ ಹಾಗೂ ಮೊಬೈಲ್ ತಂತ್ರಾಂಶಗಳ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಇದು ಸಿ-ವೃಂದದ ನೌಕರರ 10 ಪಟ್ಟು ಕೆಲಸದ ಹೊರೆಯಾಗಿದೆ. ಹೀಗಾಗಿ, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಹಾಗೂ ಇನ್ನಿತರ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.


ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಈವರೆಗೂ ಆಗಿರುವ ಎಲ್ಲ ಅಮಾನತುಗಳನ್ನು ತಕ್ಷಣ ರದ್ದುಪಡಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿ ವಂಚಿತರಾಗಿದ್ದು, ಕೂಡಲೇ ಬಡ್ತಿ ನೀಡಬೇಕು. ಮಾತೃ ಇಲಾಖೆ ಕೆಲಸದ ಜತೆಗೆ ಇತರ ಇಲಾಖೆಗಳ ಜವಾಬ್ದಾರಿ ನಿರ್ವಹಿಸುವುದರಿಂದ ಕೆಲ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆ, ಕೊಲೆ ಇತರ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕ್ರಮವಹಿಸಿ, ರಿಸ್ಕ್ ಅಲೊಯನ್ಸ್ ನೀಡಬೇಕು ಎಂದು ಆಗ್ರಹಿಸಿದರು.


ಸೆ.22ರಂದು ಚಿತ್ರದುರ್ಗದಲ್ಲಿ ನಡೆದ ಸಂಘದ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಬೇಡಿಕೆ ಈಡೇರಿಸಲು ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ತಾಲೂಕು ಅಧ್ಯಕ್ಷರಾದ ಭಾಸ್ಕರ್, ಉಮಾ ಮಹೇಶ್ವರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net