ಕಲುಷಿತ ಆಹಾರ ವಿತರಣೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Protest demanding a thorough investigation Mandya
Published on

ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿ ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸದಸ್ಯರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಮಳವಳ್ಳಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರಾಂತ ರೈತ ಸಂಘದ ಕಾರ್ಯಕಕರ್ತರು, ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡಲು ಕೆಲವರನ್ನು ಸಿಲುಕಿಸಲಾಗಿದೆ. ಹೀಗಾಗಿ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್‌ರಾಜ್ ಮಾತನಾಡಿ, ಮಳವಳ್ಳಿ ತಾಲೂಕಿನಲ್ಲಿ ಕಾನೂನು ಬಾಹಿರವಾಗಿ ಶಾಲೆ ನಡೆಸುತ್ತಿದ್ದರೂ ಕೂಡ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣ ಏರಲು ವಿಫಲರಾಗಿರುವವರನ್ನು ಅಮಾನತುಗೊಳಿಸಬೇಕು. ಗೋಕುಲ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಮೇಲೆ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಇಂತಹ ಘಟನೆಗಳು ನಡೆಯದಂತೆ ಜಾಗೃತಿ ವಹಿಸಬೇಕು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಸಿಐಟಿಯು ಮುಖಂಡ ಜಿ.ರಾಮಕೃಷ್ಣ, ಮುಖಂಡರಾದ ಎನ್.ಲಿಂಗರಾಜಮೂರ್ತಿ, ಸತೀಶ್, ಸಿದ್ದರಾಜು, ಮರಿಲಿಂಗೇಗೌಡ, ಸುಶೀಲಾ, ಚಿಕ್ಕಸ್ವಾಮಿ ಇದ್ದರು.

ಇನ್ನೊಂದೆಡೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು, ಖಾಸಗಿ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೊರ ರಾಜ್ಯದಿಂದ ಅಕ್ರಮವಾಗಿ ವಿದ್ಯಾರ್ಥಿಗಳನ್ನು ಕರೆತಂದು ಕೊಟ್ಟವರು ಯಾರು, ಒಂದು ಶಾಲೆಯಲ್ಲಿ ದಾಖಲಾತಿ, ಹಾಜರಾತಿ ವರ್ಗಾವಣೆ ಪ್ರಮಾಣ ಅಂಕಪಟ್ಟಿ ಮತ್ತೊಂದು ಶಾಲೆಯಲ್ಲಿ ನಡೆಸಲು ಅವಕಾಶ ಮಾಡಿಕೊಟ್ಟಿರುವುದು ತಪ್ಪು. ಹೀಗಾಗಿ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ನಂತರ ಶಿಕ್ಷಣ ಇಲಾಖೆ ಹಾಗೂ ತಾಲೂಕು ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ಶ್ರೀನಿವಾಸ್, ಮಂಜುನಾಥ್, ವೇದಾವತಿ, ಮಹದೇವು, ಸುರೇಶ್, ಮನುಕುಮಾರ್, ಕೃಷ್ಣ, ಶಿವನಂಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net