

ಮಡಿಕೇರಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿಯ ಎಸ್‌ಸಿ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಸುದ್ದಿಗಾರರೊಂದಿಗೆ ವಿಧಾನ ಪರಿಷತ್ತು ಸದಸ್ಯ ಸುಜಾಕುಶಾಲಪ್ಪ ಮಾತನಾಡಿ, ಪ್ರದಾನಮಂತ್ರಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದೇಶ ವಿಶ್ವಗುರುವಾಗಿ ಬೆಳೆಯುತ್ತಿದೆ. ಆದರೆ, ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿಯವರು ಸಂವಿಧಾನವನ್ನು ಕೀಳುಮಟ್ಟದಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಜತೆಗೆ ಈಗಿನ ಸಂವಿಧಾನವನ್ನು ತೆಗೆದು ಸಮಾಂತರ ಕಾನೂನು ಜಾರಿಗೆ ತರಬೇಕು ಎಂದು ಹೇಳುತ್ತಿರುವುದು ಖಂಡನೀಯ ಎಂದರು.
ಪ್ರತಿಯೊಂದು ವಿಚಾರದಲ್ಲಿ ಇಂದು ಭಾರತ ಮುಂದುವರೆದಿದೆ. ಆದರೆ, ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿರುವುದು ಸರಿಯಲ್ಲ. ಇವರು ವಿರೋಧಪಕ್ಷದ ನಾಯಕರಾಗಲು ಅನರ್ಹ ಎಂದ ಅವರು, ರಾಹುಲ್‌ಗಾಂಧಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಭಾರತ ಸಂವಿಧಾನ ಇಡೀ ವಿಶ್ವದಲ್ಲೇ ಒಳ್ಳೆಯ ಸಂವಿಧಾನವಾಗಿದೆ. ಎಲ್ಲಾ ವರ್ಗದವರು ಸಮಾನತೆಯಿಂದಿರಬೇಕು ಎಂಬ ದೃಷ್ಠಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ, ಚುನಾವಣಾ ಸಂದರ್ಭದಲ್ಲಿ ರಾಹುಲ್‌ಗಾಂಧಿ ಮತ್ತು ಪಕ್ಷದವರು ಬಿಜೆಪಿಯ ಮೇಲೆ ಗೂಬೆ ಕೂರಿಸುವ ದೃಷ್ಠಿಯಿಂದ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದೂಳಿದ ವರ್ಗಕ್ಕೆ ನೀಡಿರುವ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಭಾರತದ ಸಂವಿಧಾನವನ್ನು ಅಮೇರಿಕಾದಂತಹ ದೇಶದಲ್ಲಿ ಹೋಗಿ ಟೀಕಿಸುವ ಕಾರ್ಯವನ್ನು ರಾಹುಲ್‌ಗಾಂಧಿ ಮಾಡುತ್ತಿದ್ದಾರೆ. ಇವರು ನಿಜವಾಗಿಯೂ ಬುದ್ಧಿವಂತರ ಎಂದು ಪ್ರಶ್ನಿಸಿದ ಅವರು, ರಾಹುಲ್‌ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರು ಜಿಲ್ಲಾಧಿಕಾರಿ ವೆಂಕಟರಾಜಾ ಅವರ ಮೂಲಕ ಲೋಕಸಭಾ ಸ್ಪೀಕರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಹಿಂದುಳಿದ ವರ್ಗಗಳ ಅಪ್ರು ರವೀಂದ್ರ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಜಗದೀಶ್ ರೈ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.