

ಮಡಿಕೇರಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಅಮೆರಿಕದ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಮೀಸಲಾತಿ ರದ್ದು ಪಡಿಸುವ ಕುರಿತು ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಖಂಡನೀಯ. ಭಾರತ ಸಂವಿಧಾನ ಇಡೀ ವಿಶ್ವದಲ್ಲೇ ಉತ್ತಮ ಸಂವಿಧಾನವಾಗಿದೆ. ಎಲ್ಲಾ ವರ್ಗದವರು ಸಮಾನತೆಯಿಂದಿರಬೇಕು ಎಂಬ ದೃಷ್ಠಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ, ರಾಹುಲ್‌ಗಾಂಧಿಯವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದೂಳಿದ ವರ್ಗಕ್ಕೆ ನೀಡಿರುವ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎಂದು ಹೇಳುತ್ತಾರೆ. ಇದರಿಂದ ಬಡಜನರಿಗೆ ತೊಂದರೆಯಾಗುತ್ತದೆ ಎಂಬ ಅರಿವುಕೂಡ ಇಲ್ಲ ಎಂದರು.
ಪ್ರತಿಯೊಂದು ವಿಚಾರದಲ್ಲಿ ಇಂದು ಭಾರತ ಮುಂದುವರೆದಿದೆ. ಆದರೆ, ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿರುವುದು ಸರಿಯಲ್ಲ. ಇವರು ವಿರೋಧಪಕ್ಷದ ನಾಯಕರಾಗಲು ಅನರ್ಹ ಎಂದ ಅವರು, ರಾಹುಲ್‌ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರು ಜಿಲ್ಲಾಡಳಿತ ಮೂಲಕ ಲೋಕಸಭಾ ಸ್ಪೀಕರ್‌ಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷೆ ಮಂಜುಳ, ಸದಸ್ಯ ಪ್ರಭಾಕರ್, ವಿರಾಜಪೇಟೆ ಮಂಡಲ ಅಧ್ಯಕ್ಷ ಮುತ್ತುರಾಜ್, ಉಪಾಧ್ಯಕ್ಷ ಅಪ್ಪಾಜಿ, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.