

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ವಕೀಲರ ಸಂಘ, ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ), ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಯಿತು.
ಮಹಿಳಾ ವಕೀಲೆ ಹಾಗೂ ಅವರ ಕಕ್ಷೀದಾರರನ್ನು ಅವಾಚ್ಯ ಶಬ್ದಗಳಿಂದ ಹುಣಸೂರು ಡಿವೈಎಸ್ಪಿ ಮಹೇಶ್ ಹಾಗೂ ಹುಣಸೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ರವಿ ನಿಂದಿಸಿದ್ದು, ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿ ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಘಟನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿ ನೇಮಕ ಮಾಡಲಾಗಿದ್ದು, 10 ದಿನದೊಳಗೆ ತನಿಖಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಕೈಬಿಟ್ಟರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಎಸ್.ಉಮೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.
ನಗರದ ಪಡುವಾರಹಳ್ಳಿಯ ಮಹಾರಾಣಿ ಕಲಾ, ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಯಿತು. ಬಸ್ ಸೌಲಭ್ಯ ಸಮರ್ಪಕವಾಗಿ ಇಲ್ಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ2 ಕಿ.ಮೀ. ನಡೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಸಂಜೆ ಕೂಡ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರು ಮನೆ ತಲುಪಲು ವಿಳಂಬವಾಗುತ್ತಿದೆ. ಈ ಸಮಸ್ಯೆಗೆ ಕೂಡಲೇ ಪರಿಹಾರ ಸೂಚಿಸಬೇಕು ಎಂದು ವಿದ್ಯಾರ್ಥಿನಿಯರು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಸಹಾಯಕ ಸಂಚಾರ ವ್ಯವಸ್ಥಾಪಕಿ ಕಲಾಶ್ರೀ ಮನವಿ ಸ್ವೀಕರಿಸಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ರಫೀಕ್ ಹಾಗೂ ಇತರರು ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ಕೂಡಲೇ ಎಲ್ಲ ಅಗತ್ಯವಸ್ತುಗಳು ಮತ್ತು ಔಷಧಗಳ ಬೆಲೆಗಳ ಮೇಲೆ ನಿಯಂತ್ರಣ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪೆಟ್ರೋಲ್, ಡೀಸೆಲ್ ಬೆಲೆಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಬೇಕು, ಕೇಂದ್ರ ಸರ್ಕಾರ ಬಡವರ ವಿರೋಧಿ ನೀತಿ ಕೈಬಿಟ್ಟು ರಾಜ್ಯ ರ್ಕಾರದ ಕೋರಿಕೆಯಂತೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯರಾದ ಜಗನ್ನಾಥ್, ಜಯರಾಂ, ವಿಜಯಕುಮಾರ್ ಹಾಗೂ ಇತರರು ಪಾಲ್ಗೊಂಡಿದ್ದರು.