ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

14
Published on

ಮೈಸೂರು: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅಧಿಕಾರದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ನರಗದಲ್ಲಿ ಧರಣಿ ನಡೆಯಿತು.

ನಗರದ ಪುರಭವನದ ಮುಂಭಾಗ ಧರಣಿ ನಡೆಸಿದ ಕಾರ್ಯಕರ್ತರು, ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ಮತ್ತು ಪದೋನ್ನತಿ ನೀಡಬಾರದು ಎಂದು ಒತ್ತಾಯಿಸಿದರು.

ಜನಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದು ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯ ಒಳ ಹುನ್ನಾರವನ್ನು ಮುಂದುವರಿಸಿದರೆ ಮುಂದೆ ಅತ್ಯಂತ ಗಂಭೀರ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈಗಾಗಲೇ ಸಂವಿಧಾನ ಪರಿಚ್ಛೇದ 15(4)ನೇ ಹಾಗೂ 16(4)ನೇ ವಿಧಿಗಳ ಅಡಿ ಅಧಿಕಾರ ಬಳಸಿ ರಾಜ್ಯ ಸರ್ಕಾರಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವಿಕೆಯನ್ನು ಗುರುತಿಸಿಕೊಂಡು ಮೀಸಲಾತಿಯಂತಹ ವಿಶೇಷ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಕ್ತವಾಗಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ. ಆದ್ದರಿಂದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮೈಲ್ಯಾಕ್ ಮಾಜಿ ಅಧ್ಯಕ್ಷ ಕೃಷ್ಣ, ನಗರಪಾಲಿಕೆ ಮಾಜಿ ಸದಸ್ಯ ಸುನಂದಕುಮಾರ್, ಮುಖಂಡರಾದ ಮರಡೀಪುರ ರವಿಕುಮಾರ್,ರಾಜಣ್ಣ, ಅರಕಲವಾಡಿ ನಾಗೇಂದ್ರ, ಸ್ವಾಮಿ ತಿಲಕನಗರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net