ನದಿ ನೀರು ಬಳಕೆಗೆ ನಿಷೇಧ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

raitha
Published on

ಮಡಿಕೇರಿ: ಕೊಡಗು ಜಿಲ್ಲೆಯ ನದಿ, ತೊರೆಗಳಿಂದ ಕೃಷಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಜಿಲ್ಲಾಧಿಕಾರಿ ಹೇರಿರುವ ನಿಷೇಧ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ನದಿ ಮತ್ತು ಇತರೆ ಜಲಮೂಲಗಳಿಂದ ರೈತರ ತಮ್ಮ ಬೆಳೆಗಳಿಗೆ ನೀರು ಹಾಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.


ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮನು ಸೋಮಯ್ಯ, ಕೊಡಗಿನ ರೈತರು ವರ್ಷದಲ್ಲಿ ೨ ತಿಂಗಳು ಮಾತ್ರ ಬೆಳೆಗಳಿಗಾಗಿ ನದಿ, ತೊರೆಗಳ ನೀರು ಬಳಸುತ್ತಾರೆ. ಜಿಲ್ಲಾಧಿಕಾರಿ ವಿಧಿಸಿರುವ ನಿರ್ಬಂಧದಿಂದ ರೈತರ ಬೆಳೆಗಳು ಸಾಯುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.


ದೊಡ್ಡ ದೊಡ್ಡ ರೆಸಾರ್ಟ್‌ಗಳಲ್ಲಿ ವರ್ಷವಿಡೀ ಲಕ್ಷಾಂತರ ಪ್ರವಾಸಿಗರು ಬಂದು ನೀರು ಪೋಲು ಮಾಡಿದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತುಕೊಳ್ಳುತ್ತದೆ. ಅದೇ ರೈತರು ಬೆಳೆ ಉಳಿಸಿಕೊಳ್ಳಲು ಒಂದಿಷ್ಟು ನೀರು ತೆಗೆದರೆ ನಿರ್ಬಂಧ ವಿಧಿಸುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.


ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವೆಂಕಟ ರಾಜಾ, ಕಾನೂನಿನಂತೆ ಆದೇಶ ಹೊರಡಿಸಲಾಗಿದೆ. ರೈತರಿಗೆ ತೊಂದರೆ ಕೊಡಬೇಕು ಎನ್ನುವ ಉದ್ದೇಶ ಇಲ್ಲ. ಇಡೀ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.


ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ವಿರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net