ವಡಕೆಹಳ್ಳದ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ

30 HANUR 4
ವಡಕೆಹಳ್ಳದ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹಾಗೂ ಅಧಿಕ ಭಾರದ ಸರಕು ಸಾಗಣೆಯ ಲಾರಿಗಳ ಸಂಚಾರವನ್ನು ನಿರ್ಬಂಧಿಸುವಂತೆ ನಾಲ್‌ರೋಡ್‌ನಲ್ಲಿ ಮಹಿಳಾ ಹಾಗೂ ರೈತ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಯಿತು.
Published on

ಹನೂರು: ವಡಕೆಹಳ್ಳದ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹಾಗೂ ಅಧಿಕ ಭಾರದ ಸರಕು ಸಾಗಣೆ ಲಾರಿಗಳ ಸಂಚಾರವನ್ನು ನಿರ್ಬಂಧಿಸುವಂತೆ ಶನಿವಾರ ತಾಲೂಕಿನ ನಾಲ್‌ರೋಡ್‌ನಲ್ಲಿ ಮಹಿಳಾ ಹಾಗೂ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ನಾಲ್‌ರೋಡ್ ಬಳಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರು ಅವ್ಯವಸ್ಥೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿ, ವಡಕೆಹಳ್ಳದಿಂದ ನಾಲ್‌ರೋಡ್‌ವರೆಗೆ 16 ಕಿ.ಮೀ ಅಂತರವನ್ನು ಹೊಂದಿದ್ದು, ಹಲವು ಗ್ರಾಮಗಳಿವೆ. ಈ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಆದರೆ ಈ ರಸ್ತೆಯೂ ಸಂಪೂರ್ಣ ಹದಗೆಟ್ಟಿರುವ ಪರಿಣಾಮ ಸಂಚರಿಸಲು ತುಂಬ ತೊಂದರೆ ಅನುಭವಿಸುತ್ತಿದ್ದೇವೆ. ಅನಾರೋಗ್ಯಕ್ಕೆ ಒಳಗಾದವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದರೆ ಪಡಬಾರದ ಕಷ್ಟವನ್ನು ಪಡುವಂತಾಗಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಬೈಕ್ ಸವಾರರು ಆಯತಪ್ಪಿ ಬಿದ್ದು ಗಾಯಗೊಂಡಿರುವ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇವೆ. ಅಪಘಾತಗಳಿಂದ ಸಾವು, ನೋವುಗಳು ಸಂಭವಿಸುತ್ತಿವೆ. ಅಲ್ಲದೆ ಈ ಹದಗೆಟ್ಟ ರಸ್ತೆಯಿಂದಾಗಿ ಮಾರ್ಗಮಧ್ಯೆಯೇ ಹೆರಿಗೆಗಳಾಗಿರುವ ನಿದರ್ಶನಗಳಿವೆ. ಆದ್ದರಿಂದ ಈ ರಸ್ತೆಯನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಜತೆಗೆ ಈ ಮಾರ್ಗದಲ್ಲಿ ಅಧಿಕ ಭಾರ ಹೊತ್ತು ಸಂಚರಿಸುವ ಲಾರಿಗಳಿಗೆ ನಿರ್ಬಂಧ ವಿಧಿಸಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪಿಡಬ್ಲ್ಯುಡಿ ಎಇಇ ಚಿನ್ನಣ್ಣ ಮಾತನಾಡಿ, ರಸ್ತೆ ಅಭಿವೃದ್ಧಿ ಸಂಬಂಧ ಕ್ರಿಯಾಯೋಜನೆ ತಯಾರಿಸಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ. ಆದ್ದರಿಂದ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿದರು. ಆದರೆ ಇದಕ್ಕೊಪ್ಪದ ಪ್ರತಿಭಟನಕಾರರು ಪ್ರತಿಭಟನೆಯನ್ನು ಮುಂದುವರಿಸಿದರು. ಬಳಿಕ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಆಗಮಿಸಿ ಅಗತ್ಯ ಭರವಸೆ ನೀಡಿ ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ವೇಳೆ ಜಿಲ್ಲಾಧಿಕಾರಿ ಅವರಿಗೆ ಕರೆ ಮಾಡಿ ಗಮನಕ್ಕೆ ತಂದರು. ರಸ್ತೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ. ಹಾಗಾಗಿ ಅನುದಾನ ಬಿಡುಗಡೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಭರವಸೆ ನೀಡಿದರಲ್ಲದೆ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಆದರೂ ಮಣಿಯದ ಪ್ರತಿಭಟನಾಕಾರರು ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿ ಅವರು ಆಗಮಿಸಬೇಕು ಎಂದು ಪಟ್ಟು ಹಿಡಿದು ಧರಣಿ ಮುಂದುವರಿಸಿದರು.

ಪ್ರತಿಭಟನೆಯಲ್ಲಿ ಗುಡ್‌ಶೆಫರ್ಡ್ ಸಂಸ್ಥೆಯ ಸಿಸ್ಟರ್ ಕ್ರಿಸ್ಟಿ, ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ, ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ತಾಲೂಕು ಅಧ್ಯಕ್ಷ ಅಮ್ಜಾದ್‌ಖಾನ್, ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್ ಹಾಗೂ ಮಹಿಳಾ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net