

ವಿಜಯವಾಣಿ ಸುದ್ದಿಜಾಲ ಧಾರವಾಡ
ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಕಿರುಕುಳ ಮತ್ತು ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ರೈತನ ಬಂಧನ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಸಮಿತಿಯಿಂದ ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಬಗರ್ ಹುಕುಂ ಸಾಗುವಳಿದಾರರು 30ರಿಂದ 40 ವರ್ಷಗಳಿಂದ ತುಂಡು ಭೂಮಿಯಲ್ಲಿ ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದಾರೆ. ಸರ್ಕಾರದಿಂದ ಭೂಮಿಯ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. ಇಂಥ ಗಂಭೀರ ಪರಿಸ್ಥಿತಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರ ಮೇಲಿರುವ ಕೇಸ್‌ಗಳನ್ನು ರದ್ದು ಮಾಡಿ ಮತ್ತು ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷೆ ದೀಪಾ ಧಾರವಾಡ, ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ, ರೈತರಾದ ಬಸಪ್ಪ ನೇಕಾರ, ಕಲ್ಲಪ್ಪ, ಬಸಪ್ಪ ಬಡಾರಿ, ನಾಗರಾಜ ಕೋಟೂರು, ಪಾರವ್ವ, ಗೌರಮ್ಮ, ಮಹಾದೇವಮ್ಮ ಕಿತ್ತೂರು, ಮಲ್ಲಿಕಾರ್ಜುನ ಕಿತ್ತೂರು, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.