

ರಾಣೆಬೆನ್ನೂರ: ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಆಳೆತ್ತರದ ಗುಂಡಿಗಳು ಬಿದ್ದಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಕೂಡಲೇ ರಸ್ತೆ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕಿನ ಹಲಗೇರಿ-ಇಟಗಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿ, ಗುಂಡಿಗಳು ಬಿದ್ದು ತಿಂಗಳುಗಳೇ ಕಳೆದಿವೆ. ಈ ರಸ್ತೆ ಮಾರ್ಗವಾಗಿ ನೂರಾರು ವಾಹನಗಳು ಓಡಾಡುತ್ತಿದ್ದು, ಗುಂಡಿಗಳನ್ನು ತಪ್ಪಿಸಲು ಹೋಗಿ ಬೈಕ್ ಸವಾರರು ಬಿದ್ದು ಕೈಕಾಲು ಮುರಿದುಕೊಳ್ಳುತ್ತಿದ್ದಾರೆ. ಈ ವಿಷಯದ ಬಗ್ಗೆ ಲೋಕೊಪಯೋಗಿ ಇಲಾಖೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ರಾಜ್ಯ ಹೆದ್ದಾರಿ ಶಿವಮೊಗ್ಗ, ಉಡುಪಿ, ದಾವಣಗೆರೆ, ಚಿಕ್ಕಮಂಗಳೂರು, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಗದಗ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಸಚಿವರಾದ ಬಿ.ಸಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ಈ ರಸ್ತೆಯನ್ನು ಬಳಕೆ ಮಾಡುತ್ತಿದ್ದರೂ ದುರಸ್ತಿಗೆ ಗಮನಹರಿಸಿಲ್ಲ. ಗುಂಡಿಗಳನ್ನು ಮುಚ್ಚದಿದ್ದರೆ ಹೆದ್ದಾರಿಯನ್ನು ಸಂಪೂರ್ಣವಾಗಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಲೆಯ ಅಧಿಕಾರಿಗಳು ನಾಳೆಯಿಂದಲೇ ಗುಂಡಿಗಳನ್ನು ಮುಚ್ಚುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು.