

ಹುಬ್ಬಳ್ಳಿ : ಒಳಮೀಸಲಾತಿ ಜಾರಿಗೆ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಮಾದಿಗಸಮಗಾರ ಡಹೋರ, ಮೋಚಿಗಾರ್ ಸಂಘಟನೆಗಳ ಒಕ್ಕೂಟ ಹಾಗೂ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆ. 1ರಂದು ಪ್ರತಿಭಟನೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ಮಂಜುನಾಥ ಕೊಂಡಪಲ್ಲಿ, ಅಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸಹ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಆ. 1ರಂದು ಬೆಳಗ್ಗೆ 11.30ಕ್ಕೆ ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಲಾಗುವುದು. ನಂತರ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಬರುವ ಮಳೆಗಾಲದ ಅಧಿವೇಶನದಲ್ಲಿ ಒಳಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಆ. 16ರೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಲಾಗುವುದು. ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿ ಒಂದು ವರ್ಷವಾಗಿದೆ. ಈಗಾಗಲೇ ಕೇರಳ, ತಮಿಳನಾಡು, ಆಂದ್ರಪ್ರದೇಶದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಇನ್ನೂ ಜಾರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಳಮೀಸಲಾತಿ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗುತ್ತ ಬಂದರೂ ಜಾರಿಗೊಳಿಸಿಲ್ಲ ಎಂದು ದೂರಿದರು.
ಒಳಮೀಸಲಾತಿಗಾಗಿ ಸರ್ಕಾರ ರಚಿಸಿದ್ದ ಆಯೋಗದ ಸಮೀಕ್ಷೆ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಸಮರ್ಪಕ ದಾಖಲೆಗಳನ್ನು ಒದಗಿಸಲಿಲ್ಲ. ನಂತರ ಆಯೋಗದ ಅವಧಿಯನ್ನು ವಿಸ್ತರಿಸುತ್ತ ಹೋದ ಸರ್ಕಾರ, 3 ತಿಂಗಳಲ್ಲಿ ಆಯೋಗದಿಂದ ವರದಿ ಪಡೆದು ಒಳಮೀಸಲಾತಿ ಜಾರಿಗೊಳಿಸಲಾಗುವುದೆಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದರು. ಇದೀಗ, ಆರು ತಿಂಗಳು ಕಳೆದರೂ ಸರ್ಕಾರ ಒಳಮೀಸಲಾತಿ ಜಾರಿಗೆ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಗಂಗಾಧರ ಪೆರೂರ, ಸಜದೇವ ಮಾಳಗಿ, ರಂಗನಾಯಕ ತಪೇಲ, ಸೋಮಣ್ಣ ಹಂಜಗಿ ಸುದ್ದಿಗೋಷ್ಠಿಯಲ್ಲಿ ಇದ್ದರು.