ಕಾಂಗ್ರೆಸ್‌ನಿಂದ ಅರೆಬೆತ್ತಲೆ ಪ್ರತಿಭಟನೆ ; ರಾಹುಲ್‌ಗಾಂಧಿಗೆ ಪೊಲೀಸರ ಅಡ್ಡಿಗೆ ಖಂಡನೆ

2-klr-10
Published on

ಕೋಲಾರ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಸಂತ್ರಸ್ತೆ ಕುಟುಂಬಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಾಂತ್ವನ ಹೇಳಲು ಹೋದಾಗ ಪೊಲೀಸರು ಅಡ್ಡಿಪಡಿಸಿರುವ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಮೆಕ್ಕೆ ವೃತ್ತದಲ್ಲಿ ಶುಕ್ರವಾರ ಅರೆಬೆತ್ತಲೆಯಾಗಿ ಪ್ರತಿಭಟಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ಘಟನೆ ಖಂಡಿಸಿ ಉಪವಿಭಾಗಾಧಿಕಾರಿ ಸೋಮಶೇಖರ್‌ಗೆ ಮನವಿ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಾಂಗ್ರೆಸ್‌ಮುಕ್ತ ಭಾರತ ನಿರ್ಮಾಣ ಸಾಧ್ಯವಿಲ್ಲ. ಗಾಂಧೀಜಿ ಅಹಿಂಸಾ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಆದರೆ ಈಗಿನ ಸರ್ಕಾರಗಳು ಹಿಂಸಾ ಮಾರ್ಗದಲ್ಲಿ ನಡೆಯುತ್ತಿವೆ ಎಂದರು.

ಉತ್ತರ ಪ್ರದೇಶದ ಹತ್ರಾಸ್ ಬಳಿ ದಲಿತ ಯುವತಿ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಸಂತ್ರಸ್ತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೊರಟಿದ್ದಾಗ ಉತ್ತರ ಪ್ರದೇಶದ ಪೊಲೀಸಲು ಅಡ್ಡಿಪಡಿಸಿದ್ದಲ್ಲದೆ ರಾಹುಲ್ ಗಾಂಧಿ ಮೇಲೆ ಲಾಠಿ ಚಾರ್ಚ್ ಮಾಡಿ ಕೇಸು ದಾಖಲಿಸಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕೆಪಿಸಿಸಿ ಒಬಿಸಿ ಉಪಾಧ್ಯಕ್ಷ ಎಸ್.ಮಂಜುನಾಥ್, ಎಸ್ಸಿ ಘಟಕ ಜಿಲ್ಲಾಧ್ಯಕ್ಷ ಕೆ. ಜಯದೇವ್, ಎಸ್ಟಿ ಘಟಕ ಜಿಲ್ಲಾಧ್ಯಕ್ಷ ನಾಗರಾಜ್, ಅಲ್ಪಸಂಖ್ಯಾತ ಘಟಕದ ಇಕ್ಬಾಲ್ ಅಹಮದ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೆಂಕಟಪತೆಪ್ಪ, ಪದಾಧಿಕಾರಿಗಳಾದ ಬೆಳ್ಳಂಬರಿ ನಾಗರಾಜ್, ಎಲ್. ಕೃಷ್ಣೇಗೌಡ, ಯುವರಾಜ್, ನಾಗನಾಳ ಮಂಜುನಾಥ್, ಸಾದಿಕ್, ಖಾದ್ರೀಪುರ ಬಾಬು, ಲಾಲ್ ಬಹದ್ದೂರ್ ಶಾಸ್ತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net