ಸಿಎಂ ರಾಜೀನಾಮೆಗೆ ಆಗ್ರಹಿಸಿ 10ರಂದು ಪ್ರತಿಭಟನೆ, ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿಕೆ

Published on

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಅವರು ಸ್ವಜನ ಪಕ್ಷಪಾತದಲ್ಲಿ ತೊಡಗಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದನ್ನು ಖಂಡಿಸಿ ಜುಲೈ 10ರಂದು ಮೈಸೂರಿನ ಮುಡಾ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ರಾಜ್ಯದ ಉಪ ಚುನಾವಣೆಗಳಲ್ಲಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಯವರಿಂದ ನಡೆದಿರುವ ಅಕ್ರಮಗಳನ್ನು ಚುನಾವಣಾ ವಿಷಯವನ್ನಾಗಿ ಜನರ ಮುಂದೆ ಇಡಲಾಗುವುದು ಎಂದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಇದುವರೆಗೆ ಸುಮಾರು ಐದು ಸಾವಿರ ಕೋಟಿ ರೂಪಾಯಿ ಅವ್ಯವಹಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಪತ್ನಿ ಹೆಸರಲ್ಲಿ ನಿವೇಶನ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪ್ರಕರಣವನ್ನು ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಮುಡಾ ಹಗರಣದಲ್ಲಿ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಹ ಭಾಗಿಯಾಗಿದ್ದಾರೆ. ಇದೀಗ ರಾಜ್ಯ ಸರ್ಕಾರ ತನಿಖೆ ಮಾಡುವ ನಾಟಕ ಮಾಡುತ್ತಿದೆ. ಇದು ಪ್ರಕರಣದ ದಾರಿ ತಪ್ಪಿಸುವ ಕೆಲಸ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷದ ಮುಖಂಡರಾದ ಎನ್. ಮೂರ್ತಿ, ಬಿ.ಜಿ. ಕೊಂಗವಾಡ, ಚಂದ್ರಶೇಖರ ಮಠದ, ಮಲ್ಲಿಕಾರ್ಜುನ ರೊಟ್ಟಿಗವಾಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net