ತಿ.ನರಸೀಪುರದಲ್ಲಿ ಗುರುವಾರ ಪ್ರತಿಭಟನೆ

lr-mahadevaswam
Published on

ತಿ.ನರಸೀಪುರ : ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ರಸ್ತೆ ಸಂಚಾರ ತಡೆಗೆ ರಾಜ್ಯ ಬಿಜೆಪಿ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ವರುಣ ಬಿಜೆಪಿ ಘಟಕದ ವತಿಯಿಂದ ಜೂ.20 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ತಿರುಮಕೂಡಲು ಬಳಿಯ ಬಿಂದಿಗೆ ಫ್ಯಾಕ್ಟರಿ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಹೇಳಿದರು.


ಕಾಂಗ್ರೆಸ್ ಸರ್ಕಾರವು ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಬಿಜೆಪಿ ಸರ್ಕಾರ ಪೆಟ್ರೋಲ್ ಬೆಲೆಯನ್ನು ಕೇವಲ 1 ರೂ.ಹೆಚ್ಚಳ ಮಾಡಿದ್ದನ್ನು ವಿರೋಧಿಸಿ ಬೊಬ್ಬೆ ಹೊಡೆದಿದ್ದರು. ಆದರೆ ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಪೆಟ್ರೋಲ್‌ಗೆ 3 ರೂ., ಡೀಸೆಲ್ ಗೆ 3.50 ರೂ. ಹೆಚ್ಚಳ ಮಾಡಿದ್ದಾರೆ. ಈಗ ಅವರಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬುದು ಅರಿವಿಗೆ ಬಂದಿಲ್ಲವೇ ಎಂದು ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.


ವರುಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಚಿಕ್ಕರಂಗನಾಯಕ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರದ ದುರುಪಯೋಗವಾಗಿದೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು.


ಮೈಸೂರು ಜಿಲ್ಲಾ ಕಾರ್ಯದರ್ಶಿ ಕೆ.ವಾಸುದೇವ್ ಮಾತನಾಡಿ, ಸೆಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿ ವೆಂಕಟರಮಣ ಶೆಟ್ಟಿ, ಡೇರಿ ಅಧ್ಯಕ್ಷ ಡಿ.ಎಲ್. ಮಹದೇವಪ್ಪ, ಗ್ರಾಪಂ ಸದಸ್ಯ ಕಿರಗಸೂರು ಮಹದೇವಸ್ವಾಮಿ, ಶಿವರಾಜ್, ಎಸ್‌ಟಿ ಕಾರ್ಯಕಾರಿ ಸಮಿತಿ ಸದಸ್ಯ ಪ್ರಶಾಂತ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net