

ಸಕಲೇಶಪುರ: ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿರುವ ನಾಲ್ವರನ್ನು ಕೂಡಲೇ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ತಾಪಂ ಆವರಣದಲ್ಲಿ ಸೇರಿದ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಸಂಘಟನೆಯ ಜಿಲ್ಲಾಧ್ಯಕ್ಷೆ ಪುಷ್ಪಾ ಮಾತನಾಡಿ, ತಾಲೂಕಿನ ಹೆಗ್ಗೋವೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಗಳಗೌರಿ ಸೋಮವಾರ ಕರ್ತವ್ಯಕ್ಕೆ ತೆರಳಿದ ಸಂದರ್ಭದಲ್ಲಿ ನಾಲ್ವರು ಅವರನ್ನು ಕೇಂದ್ರಕ್ಕೆ ತೆರಳದಂತೆ ಎಳೆದಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದು 48 ಗಂಟೆಗಳಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸೌಮ್ಯ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ತಪ್ಪು ಮಾಡಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಗ್ರಾಮಸ್ಥರು ದೂರು ನೀಡಲಿ. ಆದರೆ ಹಲ್ಲೆ ನಡೆಸಲು ಇವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.
ಮಿನಿ ವಿಧಾನಸೌಧದಿಂದ ತಾಪಂ ಕಚೇರಿವರೆಗೂ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ನಾಗರತ್ನ , ಉಪಾಧ್ಯಕ್ಷೆ ಶಾರದಾ ಇತರರಿದ್ದರು.