ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಎಐಡಿಡಬ್ಲುಎ ಆಕ್ರೋಶ: ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸು ಜಾರಿಗೆ ಆಗ್ರಹ

09_12_Mdy_01(Protest)
Published on

ಮಂಡ್ಯ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಎಐಡಿಡಬ್ಲುಎ)ಯಿಂದ ಪ್ರತಿಭಟನೆ ನಡೆಯಿತು.

ಸರ್‌ಎಂವಿ ಪ್ರತಿಮೆ ಎದುರು ಜಮಾಯಿಸಿದ ಮಹಿಳೆಯರು, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಸಾಗಿ ಮನವಿ ಸಲ್ಲಿಸಿದರು. ವಿಶ್ವಸಂಸ್ಥೆಯು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಹಿಂಸೆ ನಿರ್ಮೂಲನೆಗೆ ಕರೆ ನೀಡಿದೆ. ತನ್ನ ಎಲ್ಲ ಸದಸ್ಯ ರಾಷ್ಟ್ರಗಳು ಆ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದೆ. ಈ ಕರೆಯನ್ನು ಸಾಕಾರಗೊಳಿಸಲು ಜನರ ಗಮನ ಸೆಳೆಯುವ ನಿಟ್ಟಿನಲ್ಲಿ ನ.25ರಿಂದ ಡಿ.10ರವರೆಗೆ ಆಂದೋಲನ ರೂಪಿಸಲಾಗಿದೆ ಎಂದರು.

ದುಡಿಯುವ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಖಾತ್ರಿಗೊಳಿಸಬೇಕು. ಮಹಿಳಾಪರ ಕಾನೂನುಗಳು ಸಮರ್ಪಕವಾಗಿ ಜಾರಿಯಾಗಬೇಕು. ಮಹಿಳೆಯರು ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಬ್ಯಾಂಕ್, ಮೈಕ್ರೋ ಫೈನಾನ್ಸ್ ಸೇರಿದಂತೆ ಕಿರುಸಾಲ ಸಂಸ್ಥೆಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಸಂಜೀವಿನಿ ಯೋಜನೆಯ ಒಕ್ಕೂಟದಲ್ಲಿ ಪ್ರತಿ ಗುಂಪುಗಳಿಗೆ ತಲಾ 10 ಲಕ್ಷ ರೂ. ಬಡ್ಡಿರಹಿತ ದೀರ್ಘಾವಧಿ ಸಾಲ ನೀಡಬೇಕು ಸೇರಿದಂತೆ 15ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಲತಾ, ಕಾರ್ಯದರ್ಶಿ ಸುಶೀಲಾ, ಖಜಾಂಚಿ ರಾಣಿ, ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ಜಯಲಕ್ಷ್ಮಮ್ಮ, ಜಯಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net