ರಕ್ಷಣಾ ಕಾಯ್ದೆ ಜಾರಿಗೊಳಿಸಿ: ನಗರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

16_12_Mdy_02(Protest)
Published on

ಮಂಡ್ಯ: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಶುಕ್ರವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಜನರು ವಕೀಲ ವೃತ್ತಿ ಮಾಡುತ್ತಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಸ್ವಹಿತಾಸಕ್ತಿಗಳಿಗಿಂತಲೂ ಕಕ್ಷಿದಾರರ ಹಿತಾಸಕ್ತಿಗಳಿಗೆ ಗಮನ ಕೊಡುತ್ತಾರೆ. ಆದರೆ ನೊಂದವರ ಪರವಾಗಿ ಹೋರಾಟ ಮಾಡುವ ವಕೀಲರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಕೀಲರ ಹಕ್ಕು ಮತ್ತು ಹಿತಾಸಕ್ತಿಗಳನ್ನು ಕಾಪಾಡುವಂತಹ ನಿರ್ದಿಷ್ಟ ಕಾನೂನು ಇಲ್ಲದಿರುವುದು ಶೋಚನೀಯ. ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ನಿರಂತರವಾಗಿ ಪೊಲೀಸರು, ಸಾರ್ವಜನಿಕರಿಂದ ಹಲ್ಲೆ, ದೌರ್ಜನ್ಯ ನಡೆಯುತ್ತಿವೆ. ನ್ಯಾಯ ಒದಗಿಸಿಕೊಡುವ ವಕೀಲರು ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಸಂರಕ್ಷಣಾ ಕಾಯ್ದೆ ಇಲ್ಲದಿರುವುದು ಶೋಚನೀಯ. ವೈದ್ಯರಿಗೆ ರಕ್ಷಣಾ ಕಾಯ್ದೆ ಇರುವಂತೆ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವಕೀಲರಿಗೂ ಕಾಯ್ದೆಯ ಅವಶ್ಯಕತೆ ಇದೆ. ಈ ಸಂಬಂಧ ಯಾವ ಸರ್ಕಾರವೂ ಮನವಿಗೆ ಸ್ಪಂದಿಸಿಲ್ಲ. ಆದ್ದರಿಂದ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಸಂಬಂಧಿಸಿದಂತೆ ಚರ್ಚೆ ಮಾಡಿ ಅಂಗೀಕರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ಎಂ.ಟಿ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ.ಮಹೇಶ್, ಮರಿಸ್ವಾಮಿ, ಮಹದೇವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net