

ಮಂಡ್ಯ: ನಗರದ ಕಾಳಿಕಾಂಭ ಸ್ಲಂ ನಿವಾಸಿಗಳ ನಿವೇಶನಗಳ ವಿವಾದವನ್ನು ಬಗೆಹರಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ನಗರದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮಂಡ್ಯ ಉಪ ವಿಭಾಗದ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಕಚೇರಿ ಎದುರು ಪ್ರತಿಭಟನೆ ಕುಳಿತ ಸ್ಲಂ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿವಾದವು ಹೈಕೋರ್ಟ್ ಮೆಟ್ಟಿಲೇರಿದ್ದು, ಸ್ಲಂ ಜನರ ಪರವಾಗಿ ಕಾರ್ಯ ನಿರ್ವಹಿಸಬೇಕಾದ ಅಧಿಕಾರಿಗಳು ನ್ಯಾಯಾಲಯಕ್ಕೆ ಸರಿಯಾದ ದಾಖಲೆಗಳನ್ನು ಸಲ್ಲಿಕೆ ಮಾಡದೆ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಆದ್ದರಿಂದ ಸರಿಯಾದ ರೀತಿಯಲ್ಲಿ ಮೊಕದ್ದಮೆಯನ್ನು ನಿರ್ವಹಿಸಬೇಕು. ಇಲ್ಲವಾದಲ್ಲಿ ಎಲ್ಲ ಕಡತಗಳನ್ನು ನಮಗೆ ನೀಡಿದರೆ, ನಾವೇ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ನ್ಯಾಯ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಕಾಶ್, ಜರ್ನಾಧನ್, ಶಿವಲಿಂಗಣ್ಣ, ಗೋಪಾಲ್, ಶಾಂತಾ, ಶಿಲ್ಪಾ, ಲಕ್ಷ್ಮೀ ಇತರರಿದ್ದರು.