ವಾಹನ ಸಂಚಾರ ತಡೆದು ಪ್ರತಿಭಟನೆ

20-pnp 1
Published on

ಪಾಂಡವಪುರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಹಗಲು ದರೋಡೆಗೆ ಇಳಿದಿದ್ದು ಅಗತ್ಯ ವಸ್ತುಗಳು ಮತ್ತು ಇಂಧನ ಬೆಲೆ ಏರಿಕೆ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಗುರುವಾರ ಪ್ರತಿಭಟನೆ ನಡೆಸಿದರು.


ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ಎಮ್ಮೆ ಬೆನ್ನಿಗೆ ನೇತು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಜಾಗಟೆ ಬಾರಿಸಿ, ಸೈಕಲ್ ಪ್ರದರ್ಶಿಸುವ ಮೂಲಕ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಮಾತನಾಡಿ, ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಆದರೆ ಸರ್ಕಾರ ಬಂಡತನ ಪ್ರದರ್ಶನ ಮಾಡುತ್ತಿದ್ದು, ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆ ಹೊರೆ ಹೊರಿಸಿ ಆ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಕೆ ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರ ಹಗಲಿನಲ್ಲೇ ಜನರ ಹಣ ದೋಚಲು ಮುಂದಾಗಿದೆ. ಸ್ಟ್ಯಾಂಪ್ ಪೇಪರ್, ನೋಂದಣಿ ಶುಲ್ಕ, ಮದ್ಯದ ದರ, ವಿದ್ಯುತ್ ದರದ ಜತೆಗೆ ರೈತರಿಗೆ ಒದಗಿಸುವ ಬಿತ್ತನೆ ಬೀಜಗಳ ದರವನ್ನು ಶೇ.50 ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು.


ಸರ್ಕಾರ ಇಂಧನ ದರ ಏರಿಕೆ ಆದೇಶ ಹಿಂಪಡೆಯದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷ ನಾಯಕ ಆರ್.ಅಶೋಕ್ ಒಳಗೊಂಡಂತೆ ಬಿಜೆಪಿಯ ಎಲ್ಲ ನಾಯಕರು ಕರ್ನಾಟಕ ಬಂದ್‌ಗೆ ಕರೆ ಕೊಡುವ ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಇದೇ ವೇಳೆ ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ತಕ್ಷಣ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸಬೇಕು ಎಂದು ಮನವಿ ಮಾಡಿದರು.


ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಲ್.ಆನಂದ್, ಕ್ಷೇತ್ರಾಧ್ಯಕ್ಷ ನೀಲನಹಳ್ಳಿ ಧನಂಜಯ, ಜಕ್ಕನಹಳ್ಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಎನ್.ಟಿ.ಸೋಮಶೇಖರ್, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಮುಖಂಡರಾದ ವದೇಸಮುದ್ರ ಸೋಮಶೇಖರ್, ಬಳಘಟ್ಟ ಅಶೋಕ್, ರಾಜ್‌ಕುಮಾರ್, ಈರೇಗೌಡ, ಕೆನ್ನಾಳು ಚಿಕ್ಕಣ್ಣ, ಚಿಕ್ಕಮರಳಿ ನವೀನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net