ಬೇಲೂರು: ಪೆನ್‌ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ ಹಮ್ಮಿಕೊಂಡಿರುವ ‘ಹೋರಾಟದ ನಡಿಗೆ ಹಾಸನದ ಕಡೆಗೆ’ ಪ್ರತಿಭಟನಾ ಮೆರವಣಿಗೆ ಮೇ 30ರಂದು ಬೆಳಗ್ಗೆ 10.30ಕ್ಕೆ ಹಾಸನದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಲಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅಬ್ದುಲ್ ಸಮದ್ ಹೇಳಿದರು.
ಪ್ರತಿಭಟನೆಯಲ್ಲಿ ತಾಲೂಕಿನ ಮಹಿಳೆಯರು, ದಲಿತ ಸಮುದಾಯದವರು, ರೈತರು, ಕಾರ್ಮಿಕರು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಮಹಿಳಾ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಪೆನ್‌ಡ್ರೈವ್ ಹಂಚಿಕೆ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಆರೋಪಿಗಳು ಪ್ರಭಾವಿಗಳಾಗಿದ್ದು ಸಂತ್ರಸ್ತರಿಗೆ ಬೆದರಿಕೆ ಹಾಕದಂತೆ ಎಸ್‌ಐಟಿ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಒತ್ತಾಯಿಸಿದರು.
ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಮಂಜುನಾಥ್, ದಲಿತ ಮುಖಂಡ ಬೈರೇಶ್, ನಿಂಗರಾಜು, ಸಿದ್ಧಮಂಜು, ಡಿ.ಕೆ.ವೆಂಕಟೇಶ್ ಇದ್ದರು.