

ಕೆ.ಆರ್.ಪೇಟೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ರಾಜ್ಯ ಸರ್ಕಾರ ಲೋಕಸಭಾ ಫಲಿತಾಂಶ ಬರುವುದನ್ನೇ ಕಾಯುತ್ತಿತ್ತು. ಫಲಿತಾಂಶ ಬಂದ ಕೆಲ ದಿನಗಳಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕಿದೆ. ಈ ರೀತಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ಬದುಕುವುದು ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.