

ಮೈಸೂರು: ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಾದಿಗ ವಿವಿಧ ಸಂಘಟನೆಗಳ ಒಕ್ಕೂಟ ಹಾಗೂ ಮಾದಿಗ ಸಫಾಯಿ ಕರ್ಮಚಾರಿ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಯಿತು.
ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಒಳಮೀಸಲು ಜಾರಿಗೆ ಮೀನಾಮೇಷ ಎಣಿಸುತ್ತಾ ಮಲತಾಯಿ ಧೋರಣೆ ಅನುಸರುತ್ತಿದೆ ಎಂದು ದೂರಿದರು.
ಮುಖಂಡ ಪ್ರಸನ್ನ ಚಕ್ರವರ್ತಿ ಮಾತನಾಡಿ, 35 ವರ್ಷಗಳಿಂದ ಒಳ ಮೀಸಲಾತಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸುಪ್ರೀಂ ಕೋರ್ಟ್ ಒಳ ಮೀಸಲಾತಿ ನೀಡುವಂತೆ ಆದೇಶ ನೀಡಿ ಒಂದು ವರ್ಷ ಆಗಿದೆ. ಆದರೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.
ನೆರೆಯ ರಾಜ್ಯಗಳಲ್ಲಿ ಈಗಾಗಲೇ ಒಳ ಮೀಸಲಾತಿ ಜಾರಿಯಾಗಿದೆ. ಆದರೆ ನಾನು ಅಹಿಂದ ಪರ ಎನ್ನುವ ಮುಖ್ಯಮಂತ್ರಿ ಸಿದ್ದರಾಮ್ಯಯ ಅವರು ಜಾರಿಗೆ ಮುಂದಾಗಿಲ್ಲ. ಇವರ ಯಾರ ಒತ್ತಡಕ್ಕೆ ಮಣಿದಿದ್ದಾರೆ ಎನ್ನುವುದೇ ತಿಳಿಯುತ್ತಿಲ್ಲ. ಮಾದಿಗ ಸಮುದಾಯದ 107 ಉಪ ಜಾತಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಒಳ ಮೀಸಲು ನೀಡುವ ಸಂಬಂಧ ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಆ.4ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಹಾಗಾಗಿ ವರದಿ ಸ್ವೀಕರಿಸುವ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದರೆ ಆ.15ರ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸುವ ಸಮಯದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಡ ತರಲು ರಾಜ್ಯಾದ್ಯಂತ ಹೋರಾಟಗಾರರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖಂಡ ಭಾಸ್ಕರ್‌ಪ್ರಸಾದ್ ಮಾತನಾಡಿ, ಒಳ ಮೀಸಲಾತಿಗೆ ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶವಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಆದರೆ ಮೈಸೂರಿನಲ್ಲಿ ಅಧಿಕಾರಿಗಳು ಶವಯಾತ್ರೆ ಮಾಡಲು ಬಿಟ್ಟಿಲ್ಲ. ಈ ಸರ್ಕಾರ ಸತ್ತು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಯಾವಾಗ ಬೀದಿಗಿಳಿಯುತ್ತೇವೋ ಆಗೆಲ್ಲಾ ಸರ್ಕಾರ ಮಾತನಾಡುತ್ತಿದೆ. ಬಡ್ತಿ ಮೀಸಲಾತಿ ಇನ್ನೂ ನಿಲ್ಲಿಸಿಲ್ಲ. ಆ.4ರಂದು ವರದಿ ಸ್ವೀಕರಿಸುತ್ತಿದ್ದು, ಪಕ್ಷಾತೀತ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದರು.
ಅರುಣ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ:
ಸುಪ್ರಿಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ವಿವಿಧ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಆತಿ ಹಿಂದುಳಿದ ಮತ್ತು ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರ್ಷಗಳಿಂದ ನನೆಗುದಿಗೆ ಬಿದ್ದಿದೆ ಎಂದು ದೂರಿದರು.
ಈ ಅಸಮಾನತೆಯನ್ನು ಸರಿಪಡಿಸಲು ಸುಪ್ರಿಂಕೋರ್ಟ್ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ, ಆತಂಕಕ್ಕೆ ಕಾರಣವಾಗಿದೆ ಎಂದರು.
ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಿಡಿ ಕಾರಿದರು.
ಆ.15ರ ಸ್ವಾತಂತ್ರ್ಯ ದಿನಾಚರಣೆಯೊಳಗೆ ವಿಳಂಬ ಮಾಡದೆ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು. ಒಂದು ವೇಳೆ ಸರ್ಕಾರ ಈ ಗಡುವಿನೊಳಗೆ ನಮ್ಮ ಬೇಡಿಕೆ ಈಡೇರಿಸಲು ವಿಫಲವಾದರೆ, ರಾಜ್ಯಾದ್ಯಂತ ಹೋರಾಟ ತೀವ್ರವಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡರಾದ ಬಸವರಾಜು, ಡಾ.ಆನಂದಕುಮಾರ್, ಎಂ.ಮಹದೇವು, ರಾಜಣ್ಣ, ವೆಂಕಟರಮಣ, ಜಯಸಿಂಹ ಇತರರು ಇದ್ದರು.