

ರಾಯಚೂರು: ನಿವೇಶನ, ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿದ ವಿಶೇಷ ವರ್ಗದ ಅರ್ಹ ಫಲಾನುಭವಿಗಳಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ವರ್ಗದ ಫಲಾನುಭವಿಗಳು ಈ ಮೊದಲೇ ನಿವೇಶನ, ವಸತಿ ಸೌಲಭ್ಯ ಹೊಂದಿದ್ದಲ್ಲಿ ಅಂತಹ ಅರ್ಜಿಗಳು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದರು.
ವಿಶೇಷ ವರ್ಗದಲ್ಲಿ ಬರುವ ದೇವದಾಸಿ ಮಹಿಳೆಯರು, ಎಚ್‌ಐವಿ ಸೋಂಕಿತರು ಸೇರಿದಂತೆ ಇನ್ನಿತರ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸುವ ಮೊದಲು ಅವರು ವಿಶೇಷ ವರ್ಗಕ್ಕೆ ಸೇರಿದ್ದಾರೆಯೇ ಎನ್ನುವುದನ್ನು ದೃಢೀಕರಿಸಿಕೊಳ್ಳಬೇಕು.
ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಮುಂದಿನ ಕ್ರಮಕ್ಕೆ ಮೇಲಾಕಾರಿಗಳಿಗೆ ಸಲ್ಲಿಸಿ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಜಗದೀಶ ಗಂಗಣ್ಣನವರ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ತಹಸೀಲ್ದಾರ್ ಸುರೇಶ ವರ್ಮಾ, ಡಿಎಚ್‌ಒ ಡಾ.ಸುರೇಂದ್ರ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಉಪಸ್ಥಿತರಿದ್ದರು.