ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಕಲ್ಪಿಸಿ

h16-tp meeting
Published on

ಹುಬ್ಬಳ್ಳಿ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು, ಚರಂಡಿ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು. ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸದ್ಬಳಕೆ ಮಾಡಬೇಕು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೂಚಿಸಿದರು.

ಇಲ್ಲಿಯ ಮಿನಿವಿಧಾನಸೌಧದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಶಾಲಾ ಮಕ್ಕಳಿಗೆ ವಿತರಿಸುತ್ತಿರುವ ಬಾಳೆ ಹಣ್ಣು ಗುಣಮಟ್ಟದ್ದಿಲ್ಲ ಎಂಬ ದೂರುಗಳು ಬಂದಿವೆ. ಹೀಗಾಗಿ ಮಕ್ಕಳಿಗೆ ವಿತರಿಸುವ ಬಾಳೆಹಣ್ಣುಗಳನ್ನು ಪರೀಕ್ಷಿಸಿ, ಬಳಿಕ ವಿತರಿಸಬೇಕು. ಹಾಲು ಸೇವನೆ ಮಾಡಲು ಹಿಂದೇಟು ಹಾಕುತ್ತಿರುವ ಮಕ್ಕಳ ಮನವೊಲಿಸಬೇಕು. ಸರಿಯಾಗಿ ಬಿಸಿಯೂಟ ವಿತರಿಸಬೇಕು. ಸಮವಸತ್ತ, ಶೂ ವಿತರಿಸುತ್ತಿರುವುದರ ಬಗ್ಗೆ ಗಮನ ಹರಿಸಬೇಕು. ಅಂಚಟಗೇರಿ, ಬುಡರಸಿಂಗಿ ಹಾಗೂ ಕುರಡಿಕೇರಿ ಗ್ರಾಮಗಳ ಶಾಲೆಗಳಿಗೆ ಶೀಟ್ ಅಳವಡಿಸಬೇಕಿದೆ. ಕುಸುಗಲ್ ಗ್ರಾಮದ ಶಾಲೆಗೆ ಸಿಸಿ ಕ್ಯಾಮರಾ ಅಳವಡಿಸಬೇಕು. ಮಂಟೂರು ಶಾಲೆ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆ ತರುವ ಕುರಿತು ವಿನೂತನ ಪ್ರಯೋಗ ಮಾಡಬೇಕು ಎಂದು ಸೂಚಿಸಿದರು.

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸ್ನಾನಗೃಹ, ಶೌಚಾಗೃಹ ನಿರ್ಮಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಸಮಾಜ ಕಲ್ಯಾಣ ಅಧಿಕಾರಿಗೆ ಸೂಚಿಸಿದರು.

ತೋಟಗಾರಿಕೆ ಇಲಾಖೆಯ ವಿವಿಧ ಬೆಳೆಗಳ ಮಾಹಿತಿ ಫಲಕವನ್ನು ಗ್ರಾಪಂ ಸೂಚನಾ ಫಲಕದಲ್ಲಿ ಹಾಕಬೇಕು. ಕೃಷಿ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ಕೊಡಬೇಕು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸುವಂತೆ ತಾಪಂ ಇಒ ಡಾ. ರಾಮಚಂದ್ರ ಹೊಸಮನಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪಶುಸಂಗೋಪನೆ, ಆರೋಗ್ಯ ಇಲಾಖೆ, ನೀರಾವರಿ, ಆಹಾರ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಮಂಡಿಸಿದರು.

ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ಹುಬ್ಬಳ್ಳಿ ಗ್ರಾಮೀಣ ಬಿಇಒ ಉಮೇಶ ಬೊಮ್ಮಕ್ಕನವರ, ಬಿಸಿಎಂ ಸಹಾಯಕ ನಿದೇಶಕಿ ನಾಗರತ್ನಾ ಕ್ಯಾಸನೂರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಸಂಗಮೇಶ ಬಂಗಾರಿಮಠ, ವಲಯ ಅರಣ್ಯ ಅಧಿಕಾರಿ ಆರ್.ಎಸ್. ಉಪ್ಪಾರ, ಶಿವಾನಂದ ಮಾದರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಭುಲಿಂಗ ಗಡ್ಡದ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ತೆಂಬದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net