

ಚಿಕ್ಕಮಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮನೆಗಳಿಗೆ ತುರ್ತು ಪರಿಹಾರವನ್ನು ಒದಗಿಸಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಪ್ರತಿಯೊಬ್ಬ ಅಧಿಕಾರಿಗಳು ಸ್ಪಂದಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಕೃತಿ ವಿಕೋಪದಿಂದ ಉಂಟಾದ ಹಾನಿಯ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಂತ ಬಾರಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಯಿಂದ ಮನೆಗಳು, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಗುರುತಿಸಿ ಶೀಘ್ರವಾಗಿ ಪರಿಹಾರ ಒದಗಿಸಬೇಕು ಎಂದರು.
ಯಾವುದೇ ರೀತಿಯ ಗೋಡೆ, ಮೇಲ್ಛಾವಣಿ ಕುಸಿದು ಭಾಗಶಃ ಹಾನಿಗೊಳಗಾಗಿದ್ದರೆ ಅಂತಹ ಮನೆಗಳನ್ನು ಗುರುತಿಸಿ ಪರಿಶೀಲಿಸಿ ಶೇಕಡವಾರು ಪರಿಹಾರ ನೀಡದೆ ಪೂರ್ಣ ಪ್ರಮಾಣದ ಪರಿಹಾರ ಒದಗಿಸಿಕೊಡಬೇಕು. ಗುಡ್ಡ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅಪಾಯದಲ್ಲಿದ್ದರೆ, ಅಂತಹ ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಮಟ್ಟದಲ್ಲಿ ಪಿಡಿಒಗಳು ಹಾಗೂ ಆಪ್ತಮಿತ್ರ ತಂಡದವರು ಜೊತೆಗೂಡಿ ಸಂತ್ರಸ್ತರ ನೆರವಿಗೆ ಸಹಕರಿಸಬೇಕು ಮತ್ತು ಮನೆ ಕಳೆದುಕೊಂಡು ನಿರಾಶ್ರಿತರಾದವರಿಗೆ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಬೇಕು ಎಂದು ಸೂಚನೆ ನೀಡಿದರು.
ಯಾವುದೇ ರೀತಿಯ ಹಾನಿ ಉಂಟಾದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮಸ್ಯೆ ಬಗೆಹರಿಸಲು ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಅವರ ಸಮಸ್ಯೆಗಳಿಗೆ ಪ್ರತಿಯೊಬ್ಬರು ಸ್ಪಂದಿಸಬೇಕು. ಮಳೆ ಹಾಗೂ ಪ್ರವಾಹವನ್ನು ಎದುರಿಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಅಪಾಯದ ಮುನ್ಸೂಚನೆ ಇರುವ ಪ್ರದೇಶ ಹಾಗೂ ಮನೆಗಳನ್ನು ಗುರುತಿಸಿ ಅವರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಯಾವುದೇ ಪ್ರದೇಶದಲ್ಲಿ ಹಾನಿ ಉಂಟಾದರು ತಕ್ಷಣ ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಅಪಾಯ ಸಂಭವಿಸಬಹುದಾದ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬಾರದಂತೆ ನಿರ್ಬಂಧಿಸಲಾಗಿದೆ. ಪ್ರವಾಹ ಹಾಗೂ ಮಳೆಯಿಂದ ಸಂಭವಿಸಬಹುದಾದ ತೊಂದರೆಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ ೨೬ ಡೆಂಘೆ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ ತಿಂಗಳಿಗಿAತ ಶೇಕಡ ೫೦ರಷ್ಟು ಡೆಂಘೆ ಪ್ರಕರಣಗಳು ಕಡಿಮೆಯಾಗಿದೆ. ಸಾರ್ವಜನಿಕರಲ್ಲಿ ಡೆಂಘೆ ಬಗ್ಗೆ ಅರಿವು ಮೂಡಿಸಿ ಡೆಂಘೆ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಎಸ್‌ಪಿ ವಿಕ್ರಮ ಅಮಟೆ, ಸಿಪಂ ಸಿಇಒ ಎಚ್.ಎಸ್.ಕೀರ್ತನ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್, ಎಲ್ಲ ತಾಲೂಕು ತಹಸೀಲ್ದಾರ್‌ಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.