ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

Published on

ಬಳ್ಳಾರಿ ; ಸರ್ಕಾರದಿಂದ ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯ ಒದಗಿಸಲು ಕ್ರಮವಹಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಏಜೆನ್ಸಿಗಳು ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ಸಮರ್ಪಕವಾಗಿ ನೀಡಬೇಕು. ಇಲ್ಲವಾದಲ್ಲಿ ಅನೇಕ ಆರೋಗ್ಯದ ಸಮಸ್ಯೆಗಳು ಉಂಟಾಗಿ ಗಂಭೀರವಾಗಿ ಪರಿಣಿಮಿಸುತ್ತವೆ ಎಂದು ಎಚ್ಚರಿಕೆ ನೀಡಿದರು.

ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಕೂಡ ಆಗಿದೆ. ಪಿಎಫ್, ಇಎಸ್‌ಐ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ದೊರಕುವ ಸೌಲಭ್ಯಗಳ ಕುರಿತು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ಮಹಾದೇವಸ್ವಾಮಿ ಮಾತನಾಡಿ, ನೇರಪಾವತಿ ಮತ್ತು ಹೊರಗುತ್ತಿಗೆ ಕಾರ್ಮಿಕರಿಗೂ ಗೃಹಭಾಗ್ಯ ಯೋಜನೆ ಸೌಲಭ್ಯ ನೀಡಬೇಕು. ಮ್ಯಾನುಯಲ್ ಸ್ಕಾೃವೆಂಜರ್ ಗಳ ಬಗ್ಗೆ ನಿಖರ ಮಾಹಿತಿಯನ್ನು ಸಂಗ್ರಹಿಸಲು ಮೊಬೈಲ್ ಆಪ್‌ನ್ನು ಸಿದ್ದಪಡಿಸಲಾಗಿದ್ದು, ಸಮರ್ಪಕ ಮತ್ತು ನಿಖರ ಮಾಹಿತಿ ನೀಡಬೇಕು ಎಂದು ಹೇಳಿದರು.

ಕೆಕೆಆರ್‌ಟಿಸಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ನಿಗದಿತ ಕನಿಷ್ಟ ವೇತನ ಪಾವತಿಯಾಗದಿದ್ದರೆ ಅಂತಹ ಏಜೆನ್ಸಿದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಜಿಲ್ಲಾ ಶಸ್ತಚಿಕಿತ್ಸಕರಿಗೆ ತಾಕೀತು ಮಾಡಿದರು.

ನ. 07 ರಂದು ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನದ ಅಂಗವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಉನ್ನತ ಶಿಕ್ಷಣ ಪಡೆದ ಪೌರಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಪೌರಕಾರ್ಮಿಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದರು.

ಸಭೆಯಲ್ಲಿ ಮರಣಹೊಂದಿದ ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರ ವಿವಿಧ ಪ್ರಕರಣಗಳ ಕುರಿತು ಚರ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net