

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿತಾಣಗಳಿಗೆ ಮೂಲ ಸೌಕರ್ಯ ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕಾಂಗ್ರೆಸ್ ಮುಖಂಡ ಕೆ.ಭರತ್ ಮನವಿ ಸಲ್ಲಿಸಿದರು.
ಸಚಿವರಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ ಕೆ.ಭರತ್, ಜಿಲ್ಲೆಗೆ ದಿನದಿಂದ ದಿನಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ಮತ್ತು ಭಾನುವಾರ ಹಾಗೂ ಸುಧೀರ್ಘ ರಜಾ ದಿನಗಳಲಿ ಪ್ರವಾಸಿಗರ ಸಂಖ್ಯೆ ಅತ್ಯಂತ ಹೆಚ್ಚಿರಲಿದೆ. ಪ್ರವಾಸಿ ತಾಣಗಳಾದ ಮುಳ್ಳಯ್ಯಗಿರಿ, ಮಾಣಿಕ್ಯಧಾರಾ, ಕಲ್ಲತ್ತಗಿರಿ, ಕೆಮ್ಮಣ್ಣುಗುಂಡಿ, ಝಡ್ ಪಾಯಿಂಟ್, ಹಿರೇಕೊಳಲೆ ಡ್ಯಾಮ್, ಜಾಗರ ಫಾರೆಸ್ಟ್ಗಳಲ್ಲಿ ಯಾವುದೇ ಮೂಲ ಸೌಕರ್ಯಗಳು ಇಲ್ಲವಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಗೆ ಬರುವ ಪ್ರವಾಸಿಗರಿಂದ ಊಟ, ತಿಂಡಿಗೆ ಎಂದು ಮನಸೋ ಇಚ್ಛೆ ಹಣ ವಸೂಲಿ ಮಾಡಲಾಗುತ್ತಿದೆ. ಆದರೆ ಪ್ರವಾಸಿ ತಾಣಗಳಲ್ಲಿ ಕನಿಷ್ಟಪಕ್ಷ ಶೌಚಗೃಹಗಳೂ ಇಲ್ಲವಾಗಿವೆ. ಇದರಿಂದಾಗಿ ಮಹಿಳಾ ಪ್ರವಾಸಿಗರು ಮುಜುಗರ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಕೆಲ ಗುತ್ತಿಗೆದಾರರನ್ನು ನೇಮಿಸಲಾಗಿತ್ತು. ಆದರೆ ಅವರು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಹೀಗಾಗಿ ಅವರನ್ನು ಬರಕಾಸ್ತು ಮಾಡಿ ಉತ್ತಮವಾಗಿ ಕೆಲಸ ಮಾಡುವವರಿಗೆ ಗುತ್ತಿಗೆ ನೀಡಬೇಕು ಪ್ರವಾಸೋದ್ಯಮ ಇಲಾಖೆಯಿಂದ ಆಯಕಟ್ಟಿನ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ರಿಯಾಯಿತಿ ದರದಲ್ಲಿ ಊಟ ತಿಂಡಿ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.