ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ
Published on

ಕೊಳ್ಳೇಗಾಲ: ತಾಲೂಕಿನ ಕಾವೇರಿ ನದಿ ಪಾತ್ರದ ಗ್ರಾಮಗಳು ಪದೇ ಪದೆ ಪ್ರವಾಹಕ್ಕೆ ಸಿಲುಕಿ ಅಲ್ಲಿನ ಜನ-ಜಾನುವಾರು, ಆಸ್ತಿ-ಪಾಸ್ತಿಗಳು ತೊಂದರೆಗೊಳಗಾಗುತ್ತಿರುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಬುಧವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಸರ್ಕಾರ ಗಮನ ಸೆಳೆದಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದರೆ ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯಗಳು ಅಪಾಯ ಮಟ್ಟದಲ್ಲಿ ಭರ್ತಿಯಾಗುತ್ತದೆ. ಈ ವೇಳೆ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ ನೀರು ಹರಿಬಿಡಲಾಗುತ್ತದೆ. ಪರಿಣಾಮ ಕಾವೇರಿ ಪ್ರವಾಹ ಉಂಟಾಗಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಳ್ಳೂರು, ಹಳೇ ಹಂಪಾಪುರ, ದಾಸನಪುರ, ಹಳೇ ಅಣಗಳ್ಳಿ, ಹರಳೆ, ಧನಗೆರೆ, ಸರಗೂರು, ಸತ್ತೇಗಾಲ ಸೇರಿದಂತೆ ಒಟ್ಟು 9 ಗ್ರಾಮಗಳು ಪ್ರವಾಹಕ್ಕೆ ಸಿಲುಕಿ ಅಲ್ಲಿನ ಜನ-ಜಾನುವಾರು, ಆಸ್ತಿಪಾಸ್ತಿಗಳಿಗೆ ತೊಂದರೆ ಆಗುತ್ತಿದೆ. ಈ ವಿಚಾರ ಸರ್ಕಾರದ ಗಮನದಲ್ಲಿಯೇ, ಈ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಶ್ವತ ಪರಿಹಾರವಾಗಿ ನದಿಗೆ ರಕ್ಷಣಾ ತಡೆಗೋಡೆ ನಿರ್ಮಾಣ ಮಾಡಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎ.ಆರ್.ಕೃಷ್ಣಮೂರ್ತಿ ಪ್ರಶ್ನಿಸಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉತ್ತರಿಸಿ, ಪ್ರವಾಹವನ್ನು ಶಾಶ್ವತವಾಗಿ ತಡೆಯಲು ಸಮಾರು 8 ಸಾವಿರ ಮೀಟರ್ ಉದ್ದಕ್ಕೆ ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆ, ಸರ್ವೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಸುಮಾರು 150 ಕೋಟಿ ರೂ. ಅನುದಾನದ ಲಭ್ಯತೆ ಹಾಗೂ ಸಕ್ಷಮ ಪ್ರಾಧಿಕಾರದ ಅನುಮೋದನೆಯೊಂದಿಗೆ ಕಾಮಗಾರಿ ಕೈಗೊಳ್ಳುವ ಬಗ್ಗೆ ಪರಿಶೀಲಿಸ ಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net