

ವಿಜಯಪುರ: ತಾಲೂಕು ಮಟ್ಟದಲ್ಲಿ ಪ್ರತಿ ತಿಂಗಳು ತಪ್ಪದೇ ಅಂಗವಿಕಲರ ಸಭೆ ನಡೆಸಿ ತ್ವರಿತವಾಗಿ ಪರಿಹಾರ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ 2016ರ ಕಾಯ್ದೆ ಅನ್ವಯ ಪುನಶ್ವೇತನ ಹಕ್ಕುಗಳ ರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ವಿಕಲಚೇತನರ ವಿವಿಧ ವಿಷಯಗಳು ಹಾಗೂ ವಿಕಲಚೇತನರ ಕುಂದು-ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಅಂಗವಿಕಲರ ಉನ್ನತಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಶೇ.5 ರಷ್ಟು ಹಣ ಮೀಸಲಿಟ್ಟಿದೆ. ಈ ಯೋಜನೆಯ ಲಾಭ ಅರ್ಹರಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹರು ಸಹ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಕ್ರಮ ವಹಿಸಬೇಕು. ಸರ್ಕಾರಿ ಕಚೇರಿ, ಆಸ್ಪತ್ರೆ, ಶಾಲಾ-ಕಾಲೇಜು, ಬ್ಯಾಂಕ್‌ಗಳಲ್ಲಿ ರ‌್ಯಾಂಪ್ ಮತ್ತು ರೀಲಿಂಗ್ ಅಳವಡಿಸುವ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಂಗವಿಕಲರದನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಬೇಕು ಎಂದರು.
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂಗವಿಕಲರು ನಿರ್ವಹಿಸುವ ಉದ್ಯೋಗ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಅಂಗವಿಕಲರು ಜಾಬ್ ಕಾರ್ಡ್ ಮಾಡಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಪಂ ಮಟ್ಟದಲ್ಲಿ ಅಂಗವಿಕಲರಿಗಾಗಿ ಇರುವ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವಾಣ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ್ ಬಾಬಾ ಮುದ್ದೇಬಿಹಾಳ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ, ಡಿಎಚ್‌ಒ ಸಂಪತ್‌ಕುಮಾರ ಗುಣಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್. ರೂಪಾ ಮತ್ತಿತರರಿದ್ದರು.