ಕೃಷಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಿ: ಡಾ.ಎನ್.ವಿ.ಪ್ರಸಾದ್

dc sabhe
Published on

ಮಡಿಕೇರಿ: ಬೆಳೆವಿಮೆ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳೆವಿಮೆ ಸೌಲಭ್ಯ ಬಳಸಿಕೊಳ್ಳುವಲ್ಲಿ ರೈತರಿಗೆ ಮತ್ತಷ್ಟು ಮಾಹಿತಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಾಕಷ್ಟು ದಾಸ್ತಾನು ಮಾಡಿಕೊಳ್ಳಬೇಕು ಎಂದರು.


ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್, ೨೦೨೪ರ ಮುಂಗಾರು ಹಂಗಾಮಿಗೆ ೨೦೨೪ ರ ಮೇ೨೦ ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳನ್ನು ಬೆಳೆವಿಮೆ ಯೋಜನೆಯಡಿ ಅಧಿಸೂಚಿತಗೊಂಡಿದೆ ಎಂದು ವಿವರಿಸಿದರು.


ಕೊಡಗು ಜಿಲ್ಲೆಯಲ್ಲಿ ಈ ಬಾರಿ ಜನವರಿಯಿಂದ ಇದುವರೆಗೆ ೪೫೪ ಮಿ.ಮೀ. ಮಳೆಯಾಗಿದ್ದು, ಶೇ.೫ರಷ್ಟು ಹೆಚ್ಚಾಗಿದೆ. ಆದರೆ, ಜೂನ್ ತಿಂಗಳಲ್ಲಿ ವಾಡಿಕೆ ಮಳೆ ೧೯೦ ಮಿ.ಮಿ. ಆಗಿದ್ದರೆ, ೧೪೬ ಮಿ.ಮೀ. ಮಾತ್ರ ಮಳೆಯಾಗಿದೆ. ಶೇ.೨೨ ರಷ್ಟು ಮಳೆ ಕೊರತೆ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಈಗ ಉತ್ತಮ ಮಳೆಯಾದಲ್ಲಿ ಸಸಿಮಡಿ ಕಾರ್ಯ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.


ಜಿಲ್ಲೆಯಲ್ಲಿನ ಕೆರೆಗಳನ್ನು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಉತ್ತೇಜನ ನೀಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಗಳು ಹಾಗೂ ಮೀನುಗಾರಿಕೆ ಇಲಾಖೆ ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಮೀನುಗಾರಿಕೆಗೆ ಬೇಡಿಕೆಯಿದ್ದು, ಕೆರೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ಈ ಸಂಬಂಧ ತಾ.ಪಂ.ಇಒಗಳು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸುವಂತೆ ಡಾ.ಎನ್.ವಿ.ಪ್ರಸಾದ್ ಹೇಳಿದರು.


ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿಗತಿ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಷ್ಟು ಶಾಲೆಗಳು ಸೋರುತ್ತಿವೆ ಎಂಬ ಬಗ್ಗೆ ಕೂಡಲೇ ಪಟ್ಟಿ ಮಾಡಿ ವರದಿ ನೀಡಬೇಕು. ಕಳೆದ ಆರು ತಿಂಗಳಿನಿಂದ ಸತತವಾಗಿ ಬಿಪಿಎಲ್‌ನಡಿ ಆಹಾರ-ಪಡಿತರ ಪಡೆಯದಿರುವವರ ಮಾಹಿತಿಯನ್ನು ಆಹಾರ ಇಲಾಖೆಯ ಆಯುಕ್ತಾಲಯಕ್ಕೆ ಕಳುಹಿಸುವಂತೆ ಸಲಹೆ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಈ ಸಂಬಂಧ ಸಮೀಕ್ಷೆ ನಡೆಸಿ ವರದಿ ನೀಡಲಾಗುವುದು ಎಂದು ಹೇಳಿದರು.


ಕೊಡವ ಹೆರಿಟೇಜ್ ಸಂಬಂಧಿಸಿದಂತೆ ಮುಂದುವರಿದ ಕಾಮಗಾರಿಗೆ ೫ ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಸಂಬಂಧ ಅನುದಾನ ಬಿಡುಗಡೆಯಾಗಬೇಕಿದೆ. ಹಾಗೆಯೇ ಕುಶಾಲನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಬೇಕಿದೆ ಎಂದು ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.


ಜೇನುಕೃಷಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತನಾಡಿ, ಕೊಡಗು ಜೇನಿಗೆ ನಂಜನಗೂಡು ರಸಬಾಳೆ ಮಾದರಿಯಲ್ಲಿ ಪ್ರಾಶಸ್ತ್ಯ ದೊರೆಯುವಂತಾಗಲು ಅಗತ್ಯ ಯೋಜನೆ ರೂಪಿಸುವಂತೆ ಸೂಚಿಸಿದರು.


ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗುರಿ ತಲುಪಲಾಗಿದೆ. ಸ್ವಚ್ಚ ಭಾರತ ಮಿಷನ್ ಅಭಿಯಾನ ಹಾಗೂ ವಸತಿ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಮಾಹಿತಿ ನೀಡಿದರು.


ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದ ಸಂದರ್ಭ ಡಿಎಚ್‌ಒ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜತೆಗೆ ಚರ್ಚಿಸಲಾಗಿದೆ. ಸೋಮವಾರಪೇಟೆ ಮತ್ತು ವಿರಾಜಪೇಟೆಗೆ ಹತ್ತಿರದ ಜಿಲ್ಲೆಯಿಂದ ಮೂವರು ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆಗೆ ಸಂಬಂಧಿಸಿದಂತೆ ಅಂಗನವಾಡಿಗಳಿಗೆ ಕೂಡಲೇ ತಹಶೀಲ್ದಾರರು ಜಾಗ ಒದಗಿಸಬೇಕು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಅರಣ್ಯದಲ್ಲಿರುವ ಜಾಗ ಹೊರತುಪಡಿಸಿ ಉಳಿದಂತೆ ಜಾಗ ನೀಡಲು ಆದ್ಯತೆ ಮೇಲೆ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.


ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಜಿಲ್ಲೆಯಲ್ಲಿ ೮೮೩ ಅಂಗನವಾಡಿ ಕೇಂದ್ರಗಳಿದೆ. ಇದರಲ್ಲಿ ೭೫೦ ಕ್ಕೂ ಹೆಚ್ಚು ಅಂಗನವಾಡಿಗಳು ಸರ್ಕಾರಿ ಕಟ್ಟಡದಲ್ಲಿ, ೪೮ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ೧೫ ಕ್ಕೂ ಹೆಚ್ಚು ಅಂಗನವಾಡಿಗಳ ಕಟ್ಟಡಗಳು ಪ್ರಗತಿಯಲ್ಲಿದೆ. ಉಳಿದಂತೆ ೨೨ ಅಂಗನವಾಡಿಗಳಿಗೆ ನಿವೇಶನ ಬೇಕಿದೆ ಎಂದು ಮಾಹಿತಿ ನೀಡಿದರು.


ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಗಮನಹರಿಸಬೇಕು. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.


ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ, ಸೆಸ್ಕ್ ಇಇ ಅನಿತಾ ಬಾಯಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net