ನಾಳೆ ಪಿ.ಎಸ್.ಐ ನೇಮಕಾತಿ ಪರೀಕ್ಷೆ: ಸುಸೂತ್ರವಾಗಿ ನಡೆಯಲು ಕಟ್ಟೆಚ್ಚರ ವಹಿಸುವಂತೆ ಡಿ.ಸಿ ಸೂಚನೆ

IMG-20241002-WA0031
Published on

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇದೇ ಅಕ್ಟೋಬರ್ 3ರಂದು ಪೊಲೀಸ್ ಸಬ್-ಇನ್ಸಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಸುಸೂತ್ರವಾಗಿ ಜರುಗುವಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಕಲಬುರಗಿ ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,348 ಪುರುಷ ಮತ್ತು 1,669 ಮಹಿಳಾ ಅಭ್ಯರ್ಥಿ ಸೇರಿ ಒಟ್ಟು 9,017 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಮತ್ತು ರಾಜ್ಯ ಹಂತದಲ್ಲಿ ನೇರವಾಗಿ ವೀಕ್ಷಣೆ ಮಾಡಲಾಗುತ್ತದೆ. ಪರೀಕ್ಷೆ ಮುನ್ನವೆ ಕೇಂದ್ರದ ಮುಖ್ಯಸ್ಥರು, ಕೇಂದ್ರದಲ್ಲಿ ಬೆಳಕು, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಮತ್ತು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಮುನ್ನ ಸೂಕ್ತ ತಪಾಸಣೆಗೆ ಪುರುಷ, ಮಹಿಳಾ ಪೊಲೀಸ್ ಪೇದೆಯರನ್ನು ನಿಯೋಜಿಸಬೇಕೆಂದು ಅಧಿಕಾರಿಗಳಿಗೆ ಡಿ.ಸಿ. ಅವರು ನಿರ್ದೇಶನ ನೀಡಿದರು.

ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶ ಇರುವುದಿಲ್ಲ. ಪರೀಕ್ಷೆ ದಿನ ಏನಾದರೆ ಲೋಪಗಳಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಪರೀಕ್ಷೆ ದಿನದಂದು ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದರು.

ಪರೀಕ್ಷೆ ಸುಗಮವಾಗಿ ಜರುಗಲು ಪ್ರತಿ ಕೇಂದ್ರಕ್ಕೆ ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಅಲ್ಲದೆ ಪತ್ರಿಕೆ ಸಾಗಾಟಕ್ಕೆ 10 ಜನ ರೂಟ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪೂರ್ಣ ತೋಳಿನ ಶರ್ಟ್ ಧರಿಸುವಂತಿಲ್ಲ:

ಪುರುಷ ಅಭ್ಯರ್ಥಿಗಳು ಪೂರ್ಣ ತೋಳಿನ ಶರ್ಟ್ ಗಳನ್ನು ಧರಿಸುವಂತಿಲ್ಲ. ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್ ಗಳನ್ನು ಧರಿಸಿರಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡಬೇಕು. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೊಲೆಗಳು, ಉಂಗುರುಗಳು ಮತ್ತು ಖಡ್ಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗರ ಹೊರತುಪಡಿಸಿ ವಿಸ್ತಾರವಾದ ಕಸೂತಿ, ಹೂವುಗಳು, ಭ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಿದೆ. ಎತ್ತರವಾದ ಹಿಮ್ಮಡಿ ಶೂ-ಚಪ್ಪಲಿಗಳನ್ನು ಮತ್ತು ದಪ್ಪವಾದ ಶೂ-ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿ ಭಾಗ ಹೊಂದಿರುವ ಚಪ್ಪಲಿಗಳು ಧರಿಸಬೇಕೆಂದು ತಿಳಿಸಲಾಗಿದೆ.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net