ಅ.2ರಂದು ಜನಜಾಗೃತಿ ಸಮಾವೇಶ

udp-jana
Published on

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್​ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ, ಗಾಂಧಿ ಸ್ಮೃತಿ, ಬೃಹತ್​ ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.2 ರಂದು ಬೆಳಗ್ಗೆ 11 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ನವೀನ್​ಚಂದ್ರ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತಿರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಕಿರಿಯ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ. ಧರ್ಮಸ್ಥಳ ಧಮಾರ್ಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯನ್ನು ವಹಿಸುವರು. ಧಾರ್ಮಿಕ ಚಿಂತಕ ದಾಮೋದರ್​ ಶರ್ಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್​.ಕೆ.ಡಿ.ಆರ್​.ಪಿ ಬಿ.ಸಿ ಟ್ರಸ್ಟ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್​ ಕುಮಾರ್​ ಎಸ್​.ಎಸ್​., ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಟ್ರಸ್ಟಿ ಡಾ.ಪಿ.ವಿ. ಭಂಡಾರಿ ಮೊದಲಾದವರು ಉಪಸ್ಥಿತರಿರುವರು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ಜನಜಾಗೃತಿ ಜಾಥಾ ನಡೆಯಲಿದ್ದು, 30 ಭಜನಾ ಮಂಡಳಿ ತಂಡಗಳು, 20ಕ್ಕೂ ಅಧಿಕ ಟ್ಯಾಬ್ಲೋಗಳು, 8 ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ವೇದಿಕೆಯ ಜಿಲ್ಲಾ ನಿರ್ದೇಶಕ ನಾಗರಾಜ್​ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್​ ಅಮಿನ್​, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್​, ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ, ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್​ ಅಂಬಲಪಾಡಿ, ಯೋಜನಾಧಿಕಾರಿ ರಾಮ ಎಂ. ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net