

ಕೊಪ್ಪಳ: ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಅಹವಾಲುಗಳಿಗೆ ತ್ವರಿತವಾಗಿ ಸ್ಪಂಧಿಸುವದರ ಮೂಲಕ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಎಪಿಎಂಸಿ ಆವರಣದಲ್ಲಿ ಆಗಸ್ಟ್ 06ರಂದು ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿ, ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದನ್ವಯ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕೆಲಸಗಳಿಗಾಗಿ ಕಚೇರಿಗಳಿಗೆ ಜನರ ಅಲೆದಾಟ ತಡೆಯುವುದು ಹಾಗೂ ಸಾರ್ವಜನಿಕರ ಹೊರೆ ತಡೆಯುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಸಕಾಲದಲ್ಲಿ ಸೇವೆಗಳು ಸಿಗುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಅರ್ಜಿ, ಅಹವಾಲುಗಳಿಗೆ ತಕ್ಷಣವೇ ಸ್ಪಂಧಿಸಿ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಈ ಹಿಂದೆ ಜಿಲ್ಲೆಯ ಕನಕಗಿರಿ ಮತ್ತು ಕುಕನೂರ ತಾಲ್ಲೂಕುಗಳಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ಚೀಕೃತವಾದ ಅರ್ಜಿಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಿ ಜನತೆಗೆ ಸ್ಪಂದನೆ ನೀಡಲಾಗಿದೆ. ಅದೇ ರೀತಿ ಕಾರಟಗಿ ತಾಲೂಕಿನ ಸಿದ್ದಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಈ ಎಲ್ಲಾ ಅರ್ಜಿಗಳ ಮಾಹಿತಿಯನ್ನು ಐ.ಪಿ.ಜಿ.ಆರ್.ಎಸ್.ನಲ್ಲಿ ಅಪ್ಲೋಡ್ ಮಾಡಲಾಗುವುದು. ಇದರಿಂದ ಸಾರ್ವಜನಿಕರು ತಮ್ಮ ಅರ್ಜಿಯ ಸ್ಥಿತಿಯ ಬಗ್ಗೆ ಆನ್‌ಲೈನ್ ಮೂಲಕ ಪರಿಶೀಲಿಸಬಹುದಾಗಿದೆ ಎಂದರು.
ಸಾರ್ವಜನಿಕರಿಂದ ವಿವಿಧ ಅರ್ಜಿ, ಮನವಿ ಸಲ್ಲಿಕೆ: ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣಪ್ಪ ಅವರು ಹುಳ್ಕಿಹಾಳ ಸರಕಾರಿ ಪ್ರೌಢ ಶಾಲೆಯ ಜಾಗವನ್ನು ಬೇಗನೆ ಹದ್ದುಬಸ್ತು ಮಾಡಿಕೊಡುವಂತೆ ಮನವಿ ಸಲ್ಲಿಸಿದರು. ಸಿದ್ದಾಪುರದ ಪ್ರವೀಣ ಕುಮಾರ ಅವರು ಸಿದ್ದಾಪುರ ಗ್ರಾಮಕ್ಕೆ ಒಂದು ರಾಷ್ಟ್ರೀಕೃತ ಬ್ಯಾಂಕ್ ಶಾಖೆಯನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಮುಸ್ಟೂರ ಗ್ರಾಮದ ಲಕ್ಷ್ಮಮ್ಮ, ರಾಣಿ, ವೆಂಕಟರಮಣಪ್ಪ, ಯಮನಮ್ಮ, ಚಿಕ್ಕ ಸೂರ್ಯ ರಾವ್ ಅವರು ಸಂಧ್ಯಾ ಸುರಕ್ಷಾ ಮಾಸಶನಕ್ಕೆ ಅರ್ಜಿ ಸಲ್ಲಿಸಿದರೆ, ಯಂಕಮ್ಮ ಅವರು ನಿರ್ಗತಿಕ ವಿಧವಾ ವೇತನಕ್ಕಾಗಿ ಅರ್ಜಿ ಸಲ್ಲಿಸಿದರು. ಶಾಲಿಗನೂರು ಗ್ರಾಮದ ನಾಗರಾಜ ಹೊಸಮನಿ ಅವರು ತಮ್ಮ ಜಮೀನಿನ ಪಹಣಿ ಪತ್ರಿಕೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ, ಯರಡೋಣ ಗ್ರಾಮದ ಎ.ಸಂಜೆಮ್ಮ ಅವರು ತಮ್ಮ ಹೆಸರಿಗೆ ಜಮೀನು ವರ್ಗಾವಣೆ ಮಾಡುವ ಕುರಿತಂತೆ ಹಾಗೂ ಇತರ ಗ್ರಾಮಸ್ಥರು ಪೌತಿ ಖಾತೆ, ಪಹಣಿ ತಿದ್ದುಪಡಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಅರ್ಜಿ ಸಲ್ಲಿಸಿದರು. ಪಿಂಚಣಿ ಸೌಲಭ್ಯ ಸೇರಿದಂತೆ ಕೆಲವೊಂದನ್ನು ಅಹವಾಲುಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹರಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕಾರಟಗಿ ತಹಸೀಲ್ದಾರರಾದ ಎಂ.ಕುಮಾರ ಸ್ವಾಮಿ, ತಾಪಂ ಇಓ ಲಕ್ಷ್ಮೀದೇವಿ ಯಾದವ್, ಗ್ರಾ.ಪಂ ಅಧ್ಯಕ್ಷರಾದ ಶಿವಗಂಗಮ್ಮ ಪಂಪಾಪತಿ ಭೋವಿ, ಉಪಾಧ್ಯಕ್ಷರಾದ ಗಂಗಪ್ಪ ಸುಂಕದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.