

ಮೈಸೂರು: ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ಏ.29 ರಿಂದ ಮೇ.16ರವರೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ-2’ ನಡೆಯಲಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ.
ಬನ್ನಿಮಂಟಪದ ಸೆಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಎಸ್‌ಬಿಆರ್‌ಆರ್ ಮಹಾಜನ ಪದವಿಪೂರ್ವ ಕಾಲೇಜು, ಕುವೆಂಪುನಗರ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು, ಸಯ್ಯಜಿರಾವ್ ರಸ್ತೆಯ ಡಿ. ಬನುಮಯ್ಯ ಪದವಿ ಪೂರ್ವ ಕಾಲೇಜು, ಜೆಎಲ್‌ಬಿ ರಸ್ತೆಯ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಎನ್.ಎಸ್. ರಸ್ತೆಯ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಪಾಲಸ್ವಾಮಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.