ಇಂದಿನಿಂದ ಪಿಯುಸಿ ಪರೀಕ್ಷೆ

8adarshkdga1
Published on

ಆದರ್ಶ್ ಅದ್ಕಲೇಗಾರ್ ಮಡಿಕೇರಿ


ಇಂದಿನಿಂದ ಜಿಲ್ಲೆಯ ೧೯ ಪರೀಕ್ಷಾ ಕೇಂದ್ರಗಳಲ್ಲಿ ೫೫೮೧ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಪರೀಕ್ಷೆ ಆರಂಭವಾಗಲಿದೆ.


ಮಾ.೯(ಇಂದು)ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಕೊಡಗಿನಲ್ಲಿ ಅಂತಿಮ ಹಂತದ ಸಿದ್ಧತೆ ಭರದಿಂದ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತತ್ವದಲ್ಲಿ ಸಭೆ ಆಯೋಜಿಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಅನನೂಕೂಲ ಆಗದಂತೆ ಪರೀಕ್ಷೆಗಳನ್ನು ನಡೆಸುವಂತೆ ಸಂಬಂಧಿಸಿದವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು ೧೯ ಪರೀಕ್ಷಾ ಕೇಂದ್ರಗಳಿದ್ದು, ಎಲ್ಲಾ ಕೇಂದ್ರಗಳಲ್ಲೂ ಉತ್ತಮ ಬೆಳಕು, ಗಾಳಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಅಧ್ಯತೆ ಕೊಡಲಾಗಿದೆ. ಒಟ್ಟು ೫೫೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.


ಗುರುವಾರದಿಂದ ಆರಂಭವಾಗುವ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ಲಾಗಿನ್ ಪ್ರಕ್ರಿಯೆ ಬುಧವಾರ ಭರದಿಂದ ನಡೆದಿದೆ. ಉತ್ತರ ಪತ್ರಿಕೆಗಳು ಈಗಾಗಲೇ ಜಿಲ್ಲೆಯನ್ನು ತಲುಪಿದ್ದು ಅತ್ಯಂತ ಸುರಕ್ಷಿತವಾಗಿ ಸಂಗ್ರಹಿಸಿ ಇಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳನ್ನು ಆಯಾಯಾ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸುವ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಆ ಕಾಲೇಜು ಹೊರತುಪಡಿಸಿ ಬೇರೆ ಕಾಲೇಜುಗಳ ಉಪನ್ಯಾಸಕರು ಮೇಲ್ವಿಚಾರಕರಾಗಬೇಕಿರುವುದರಿಂದ ಆ ಹೊಣೆಗಾರಿಕೆಯನ್ನೂ ಹಂಚಿಕೆ ಮಾಡಲಾಗಿದೆ.


ಸುಗಮ ಪರೀಕ್ಷೆ: ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಸೇರಿದಂತೆ ಎಲ್ಲರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ನಿಯಂತ್ರಣ ಕೇಂದ್ರಗಳಲ್ಲಿನ ಎಲ್ಲಾ ಚಟುವಟಿಕೆಗಳು ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲೇ ನಡೆಯಲಿದೆ. ಬಹುತೇಕ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸುಗಮವಾಗಿ ಪರೀಕ್ಷೆ ನಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.


ಸಮವಸ್ತ್ರ ಕಡ್ಡಾಯ: ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಿದೆ. ಸಮವಸ್ತ್ರವಿರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಕಡ್ಡಾಯವಾಗಿದೆ.


೫೫೮೧ ವಿದ್ಯಾರ್ಥಿಗಳು: ಜಿಲ್ಲೆಯಲ್ಲಿ ಒಟ್ಟು ೫೫೮೧ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, ಪರೀಕ್ಷೆ ಎದುರಿಸಲಿದ್ದಾರೆ. ಕಲಾ ವಿಭಾಗದಲ್ಲಿ ೧೧೧೪, ವಾಣಿಜ್ಯ ವಿಭಾಗದಲ್ಲಿ ೨೪೩೭, ವಿಜ್ಞಾನ ವಿಭಾಗದಲ್ಲಿ ೧೨೯೯ ವಿದ್ಯಾರ್ಥಿಗಳಿದ್ದಾರೆ. ಒಟ್ಟು ೬೫ ಕಾಲೇಜುಗಳಿದ್ದು, ೧೪ ಸರ್ಕಾರಿ, ೧೩ ಅನುದಾನಿತ, ೩೪ ಅನುದಾನ ರಹಿತ, ೪ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಕಾಲೇಜುಗಳು ಜಿಲ್ಲೆಯಲ್ಲಿವೆ.

೭ ತಂಡಗಳ ರಚನೆ
ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮ ಮತ್ತು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ೭ ಕಡೆಗಳಲ್ಲಿ ಮಾರ್ಗಾಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ ೨ ಕಡೆ, ಸೋಮವಾರಪೇಟೆ ತಾಲೂಕಿನ ೧, ಕುಶಾಲನಗರ ತಾಲೂಕಿನ ೨, ವಿರಾಜಪೇಟೆ ತಾಲೂಕಿನ ೧ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ೧ ಮಾರ್ಗಾಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ತಂಡದಲ್ಲಿ ಕಂದಾಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡಿದೆ.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಜಿಲ್ಲೆಯಲ್ಲಿ ಮಾ.೯ ರಿಂದ ಮಾ.೨೯ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶರವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಆರಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದು, ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು. ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಮಡಿಕೇರಿ ೫, ವಿರಾಜಪೇಟೆ ೨, ಪೊನ್ನಂಪೇಟೆ ೪ ಸೋಮವಾರಪೇಟೆ ೩, ಕುಶಾಲನಗರ ೫ ಸೇರಿದಂತೆ ಜಿಲ್ಲೆಯ ೧೯ ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥಿತ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗೃತೆ ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿರುವ ಪ್ರದೇಶದ ೧೦-೧೫ ಕಿ.ಮೀ. ಒಳಗೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಬಾರಿ ಶೇ.೭೩ರಷ್ಟು ಫಲಿತಾಂಶ ಪಡೆಯಲಾಗಿದ್ದು, ಈ ಬಾರಿ ಅದಕ್ಕಿಂತಲು ಹೆಚ್ಚಿನ ಫಲಿತಾಂಶ ಪಡೆಯಲು ಪ್ರಯತ್ನಿಸಲಾಗುತ್ತಿದೆ.
ಪುಟ್ಟರಾಜು, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ

ಪರೀಕ್ಷಾ ಕೇಂದ್ರಗಳು
ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ, ಕುಶಾಲನಗರ, ನೆಲ್ಯಹುದಿಕೇರಿ, ಕೂಡಿಗೆ, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಮತ್ತು ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ಸುಂಟಿಕೊಪ್ಪ, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ತೆರಳುವ ಪರೀಕ್ಷಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದಲ್ಲಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ಸಂಚಾರದಲ್ಲಿ ವ್ಯತ್ಯಯವಿರುವ ಕಡೆ ಬಸ್ಸುಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು.
ಗೀತಾ, ವ್ಯವಸ್ಥಾಪಕಿ ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net