

ಸುಂಟಿಕೊಪ್ಪ: ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ 4 ಪದವಿ ಪೂರ್ವ ಕಾಲೇಜಿನ 282 ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆದಿದ್ದಾರೆ.
ಚೆನ್ನಮ್ಮ ಪಿಯು ಕಾಲೇಜು ಮಾದಾಪುರ, ಮುರಾರ್ಜಿ ದೇಸಾಯಿ ಪಿಯುಸಿ ಗರಗಂದೂರು, ಸುಂಟಿಕೊಪ್ಪ ಸಂತ ಮೇರಿ ಸಂಯುಕ್ತ ಪಿಯುಸಿ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 118 ಬಾಲಕರು ಹಾಗೂ 164 ಬಾಲಕಿಯರು ಒಟ್ಟು 282 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದರು. ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು. ಈ ವೇಳೆ ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ತೊಡಗದೆ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಬೇಕು ಎಂದರು.
ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ 200 ಮೀಟರ್ ವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರ ಭದ್ರತೆ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
========================
ಚಿತ್ರ.1:ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು.