ಆ.21ರಿಂದ ಪಿಯುಸಿ ಪೂರಕ ಪರೀಕ್ಷೆ

PU EXAM MEETING
ವಿಜಯಪುರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಭೆ ನಡೆಸಿದರು. ಡಾ.ಚಂದ್ರಶೇಖರ ಹೊಸಮನಿ, ಖಜಾನೆಯ ಉಪ ನಿರ್ದೇಶಕ ರಾಜಗೋಪಾಲ ಇದ್ದಾರೆ.
Published on

ವಿಜಯಪುರ: ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಆ.21 ರಿಂದ ಸೆ.2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ಗಳು ಜರುಗಲಿದ್ದು ಈ ಪರೀಕ್ಷೆಯು ಸುಸೂತ್ರವಾಗಿ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿದ ಅವರು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಐದು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ವಿಜಯಪುರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1255, ಇಂಡಿ ಶ್ರೀ ಶಾಂತೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 656, ಬಸವನ ಬಾಗೇವಾಡಿಯ ಶ್ರೀ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೀಜಿನಲ್ಲಿ 511, ಸಿಂದಗಿಯ ಎಚ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ 954 ಹಾಗೂ ಮುದ್ದೇಬಿಹಾಳದ ಜ್ಞಾನ ಭಾರತಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 348 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3,724 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷಾ ದಿನಗಳಂದು ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಗಳನ್ನು ಪಡೆದು, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದೊಳಗೆ ತಲುಪಿಸಲು ಐದು ರೂಟ್ ನಿಗದಿಪಡಿಸಿಲಾಗಿದೆ. ತಹಸೀಲ್ದಾರ್‌ರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ತ್ರಿಸದಸ್ಯ ಸಮಿತಿ ಸದಸ್ಯರಾಗಿರುತ್ತಾರೆ ಎಂದರು.

ತಹಸೀಲ್ದಾರ್‌ರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಿಗದಿಪಡಿಸಿರುವ ಕೊಠಡಿಯಲ್ಲಿ ಗೌಪ್ಯ ಬಂಡಲ್ ಗಳನ್ನು ಮುಖ್ಯ ಅಧೀಕ್ಷಕರು ಹಾಗೂ ಸಹಾಯಕ ಮುಖ್ಯ ಅಧೀಕ್ಷಕರು ಸಿಸಿಟಿವಿ ಕಣ್ಗಾವಲಿನಲ್ಲಿಯೇ ಹಸ್ತಾಂತರಿಸುವುದು, ಗೌಪ್ಯ ಬಂಡಲ್ ವಿವರ ಪರಿಶೀಲಿಸಿ ಪಡೆದುಕೊಳ್ಳುವುದು, ಪರೀಕ್ಷಾ ಸಂಬಂಧಿತ ಕಾರ್ಯಗಳಿಗಾಗಿ ಬಳಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದೆ. ಈ ಕೇಂದ್ರಗಳ ಉಪ ಮುಖ್ಯ ಅಧೀಕ್ಷಕರು ಮತ್ತು ಪ್ರಶ್ನೆ ಪತ್ರಿಕೆ ಪಾಲಕರು ತಮ್ಮ ಕೇಂದ್ರದಲ್ಲಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗಾಗಿ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಅದರಂತೆ, ಈ ಪರೀಕ್ಷೆಯಲ್ಲಿ ತೊಡಗಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ 200 ಮೀ.ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ಬೆಳಗ್ಗೆ 8 ರಿಂದ ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಚಂದ್ರಶೇಖರ ಹೊಸಮನಿ, ಖಜಾನೆಯ ಉಪ ನಿರ್ದೇಶಕ ರಾಜಗೋಪಾಲ ಹಾಗೂ ತಹಸೀಲ್ದಾರ್‌ರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net