

ಚಿಟಗುಪ್ಪ: ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಕೊಳವೆಬಾವಿ ಮತ್ತು ಟ್ಯಾಂಕ್ ಹಾಗೂ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು ಅವಶ್ಯಕ. ಈ ಬಗ್ಗೆ ನಿರ್ಲಕ್ಷ ಸಹಿಸಲ್ಲ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳಿಗೆ ಎಚ್ಚರಿಸಿದರು.
ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಎಖೇಳ್ಳಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಮೂಲಸೌಕರ್ಯ ಮತ್ತು ಸ್ವಚ್ಛತೆ ಕುರಿತು ಕುಡಿಯುವ ನೀರು ನೈರ್ಮಲ್ಯ ಇಲಾಖೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದ ಅವರು, ಬರೀದಾಬಾದ್ ಮತ್ತು ಬಕಚೌಡಿ ಗ್ರಾಮಗಳಲ್ಲಿ ಕೆಲದಿನ ಹಿಂದೆ ಕುಡಿಯುವ ನೀರಿನಲ್ಲಿ ಕಲುಷಿತ ಮಿಶ್ರಣವಾಗಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಮತ್ತು ಪಿಡಿಒಗಳ ನಿರ್ಲಕ್ಷದಿಂದ ಜೆಜೆಎಂ ಕಾಮಗಾರಿ ಕಳಪೆಯಾಗುತ್ತಿದೆ. ಇದರಿಂದ ಹಲವೆಡೆ ಕಲುಷಿತ ನೀರು ಮಿಶ್ರಣವಾಗಿ ಜನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ಸಮಸ್ಯೆ ಕುರಿತು ಪರಿಶೀಲಿಸಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮದ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯಲ್ಲಿ ನಿಷ್ಕಾಳಜಿ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು. ನೀರು ಕುದಿಸಿ ಆರಿಸಿ ಸೇವಿಸುವಂತೆ ತಿಳಿಹೇಳಬೇಕು. ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಗ್ರಾಪಂ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲರೂ ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸಬೇಕು ಎಂದರು. ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ಶಾಮಸುಂದರ ಕಾಳೇಕರ್, ಚಿಟಗುಪ್ಪ ತಾಪಂ ಇಒ ಅಕ್ರಮ್ ಪಾಶಾ, ಎಇಇ ಸಂಜುಕುಮಾರ ಸಳ್ಕೆ ಇತರರಿದ್ದರು.