

ಬೇಲೂರು: ಜಲಜೀವನ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಕೊಡುವ ಮಹತ್ತರ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ನೀಗಲಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯಿತಿಯ ಇಬ್ಬೀಡು ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಜೀವನ್ ಮಿಷನ್ ಯೋಜನೆಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದೆ. ಈ ಯೋಜನೆ ಮೂಲಕ ಮಹಿಳೆಯರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಸರ್ಕಾರ ಮುಂದಾಗಿದೆ. ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇಬ್ಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಕೊಡುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಪ್ರತಿ ಮನೆಗೂ ನಲ್ಲಿ ಅಳವಡಿಸಿ ಪೈಪ್‌ಲೈನ್ ಮೂಲಕ ನೀರು ಪೂರೈಸಲಾಗುವುದು ಎಂದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ರಂಜಿತಾ, ಸದಸ್ಯರಾದ ಐ.ಜಿ.ಲೋಕೇಶ್, ಜಯಣ್ಣ, ಮಂಜುನಾಥ್, ಸಚಿನ್, ಆನಂದ್, ರಮೇಶ್, ಮುಖಂಡರಾದ ತಾರೇಶ್, ಪುಟ್ಟಸ್ವಾಮಿಗೌಡ, ವಿಷ್ಣುಕುಮಾರ್, ರಮೇಶ್, ಗ್ರಾಮಸ್ಥರಿದ್ದರು.